Thursday, November 20, 2025

ರಜತ ಮಹೋತ್ಸವದಲ್ಲಿ ಜೆಡಿಎಸ್‌ನ ಹೊಸ ರಣಕಹಳೆ: ನಿಖಿಲ್‌ಗೆ ಸಿಗಲಿದೆಯೇ ‘ದಳಪತಿ’ ಪಟ್ಟ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜನತಾ ದಳ ಪಕ್ಷವು ಅಸ್ತಿತ್ವಕ್ಕೆ ಬಂದು 25 ವರ್ಷಗಳು ಪೂರ್ಣಗೊಂಡ ಶುಭ ಸಂದರ್ಭದಲ್ಲಿ ರಾಜ್ಯಾದ್ಯಂತ ರಜತ ಮಹೋತ್ಸವವನ್ನು ಆಚರಿಸಲು ನಿರ್ಧರಿಸಿದೆ. ಇದರ ಭಾಗವಾಗಿ, ನಾಳೆ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ 25ನೇ ವರ್ಷಾಚರಣೆಯ ಬೃಹತ್ ಕಾರ್ಯಕ್ರಮ ನಡೆಯಲಿದೆ.

ಈ ಐತಿಹಾಸಿಕ ಕಾರ್ಯಕ್ರಮದಲ್ಲೇ ಪಕ್ಷದ ಸಂಘಟನೆಯಲ್ಲಿ ಬಹುಮುಖ್ಯ ಬದಲಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಹಾಲಿ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಬದಲಿಗೆ ಅವರ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನಾಗಿ ಘೋಷಿಸುವ ಸಂಭವವಿದೆ.

ಹೆಚ್.ಡಿ. ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿರುವ ಹಿನ್ನೆಲೆಯಲ್ಲಿ ಮತ್ತು ಆಗಾಗ ಆರೋಗ್ಯದ ಸಮಸ್ಯೆ ಎದುರಿಸುತ್ತಿರುವ ಕಾರಣ, ಪಕ್ಷದ ಚುಕ್ಕಾಣಿಯನ್ನು ಯುವ ನಾಯಕತ್ವಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ. ನಾಳೆ ನಡೆಯಲಿರುವ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಂಡು, ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಈ ಮಹತ್ವದ ನಿರ್ಧಾರವು ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಹೊಸ ಅಧ್ಯಾಯ ಆರಂಭಿಸಲು ನಾಂದಿಯಾಗಲಿದೆ.

error: Content is protected !!