ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ’ ಎನ್ನುವ ಘೋಷ ವಾಕ್ಯದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದ್ದೆದ್ದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.
ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ನಾಯಕರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಅಡ್ಡಗಟ್ಟಿದ ಪೊಲೀಸರು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಮುಖಂಡರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ಎಲ್ಲೆಡೆ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಫಲಕಗಳು ರಾರಾಜಿಸಿದವು.
ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಸಂಸದರಾದ ಮಲ್ಲೇಶ್ ಬಾಬು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ಅನೇಕ ನಾಯಕರು ಅಸಂಖ್ಯಾತ ಕಾರ್ಯಕರ್ತರು ಪಾಲ್ಗೊಂಡಿದ್ದರು.