ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಸಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಹೊಸದಿಗಂತ ವರದಿ,ಹಾಸನ:

ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಾಜಿ ಸಚಿವ ಎಚ್.ಡಿ.ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ವತಿಯಿಂದ ಗೊರೂರಿನ ಹೇಮಾವತಿ ಜಲಾಶಯ ಯೋಜನೆ ಮುಖ್ಯ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ತಮ್ಮ ಕುರ್ಚಿ ಉಳಿಸಿಕೊಳ್ಳಲು ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರ ನಮ್ಮ ರೈತರ ಬೆಳಗಳಿಗೆ ನೀರು ಕೊಡಲು ಸತಾಯಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು, ನೀರಾವರಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾತನಾಡಿ, ನೀರಾವರಿ ಸಲಹಾ ಸಮಿತಿ ಸಭೆ ಕರೆಯದೆ ನೀರು ಹೇಗೆ ಬಿಟ್ಟಿರಿ, ಎಲ್ಲ ನೀರನ್ನು ತಮಿಳುನಾಡಿಗೆ ಬಿಟ್ಟು ನಮ್ಮ ರೈತರಿಗೆ ಪರಿಹಾರ ಕೊಡುವ ಕೆಲಸವನ್ನಾದರೂ ಮಾಡಿ. ಜಲಾಶಯದಲ್ಲಿ ನೀರು ಇಟ್ಟುಕೊಂಡು ಏನು ಮಾಡುತ್ತಿದ್ದೀರಿ, ನನ್ನ ಬಿಟ್ಟು ಹೇಗೆ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿದಿರಿ. ಇದರಿಂದ ಒಬ್ಬ ಶಾಸಕನ ಹಕ್ಕುಚ್ಯುತಿ ಆಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು.

ಯಾರೂ ಹೇಳೋರು, ಕೇಳೋರು ಇಲ್ಲಾ, ರಾಜ್ಯದಲ್ಲಿ ಸರ್ಕಾರ ಇದೆಯಾ ಎಂಬ ಅನುಮಾನ ಮೂಡಿದೆ. ರೈತರ ಮನೆ ಹಾಳಾಗಿ ಹೋಗುತ್ತಿದೆ. ಆದರೂ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಜಿಲ್ಲೆಯಲ್ಲಿ ತೀವ್ರ ಬರಗಾಲ ಎದುರಾಗಿದೆ. ಬೆಳೆಗಳು ಸಂಪೂರ್ಣ ಒಣಗಿದ್ದು, ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಕೆರೆ ಕಟ್ಟೆಗಳನ್ನು ತುಂಬಿಸಲು ನೀರು ಬಿಡುವಂತೆ ಒತ್ತಾಯ ಮಾಡಿದರು.

ಹೇಮಾವತಿ ಜಲಾನಯನ ಪ್ರದೇಶದಲ್ಲಿ ಕಾಲುವೆ ನೀರು ನಂಬಿ ಭತ್ತ ನಾಟಿ ಮಾಡಿದ್ದಾರೆ, ಆ ಬೆಳೆ ಉಳಿಸಲು ನೀರು ಹರಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜೆಡಿಎಸ್‌ನ ನೂರಾರು ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!