ಎರಡು ಪ್ರತ್ಯೇಕ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು -ಕಾಶ್ಮೀರದ ರಾಜೌರಿ ಮತ್ತು ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಎರಡು ಪ್ರತ್ಯೇಕ ಎನ್‌ಕೌಂಟರ್‌ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಇನ್ನೊಬ್ಬಾತ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.

ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.

ಸ್ಥಳಕ್ಕೆ ಭದ್ರತಾಪಡೆಗಳು ತೆರಳಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸ್ಥಳವನ್ನು ಸುತ್ತುವರೆದ ಯೋಧರು, ಎನ್ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹತ್ಯೆಗೀಡಾದ ಭಯೋತ್ಪಾದಕನನ್ನು ಕುಲ್ಗಾಮ್ ನಿವಾಸಿ ಅಬಿದ್ ವಾನಿ ಎಂದು ಗುರುತಿಸಲಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯೊಂದಿಗೆ ಈತ ಸಂಪರ್ಕ ಹೊಂದಿದ್ದನೆಂದು ವರದಿಗಳು ತಿಳಿಸಿವೆ. ಹತ್ಯೆಯಾದ ಉಗ್ರನಿಂದ 1 ಎಕೆ 47 ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ರಜೌರಿಯಲ್ಲಿ ಎನ್ಕೌಂಟರ್ ನಡೆಸಿರುವ ಭಾರತೀಯ ಸೇನಾಪಡೆಗಳು, ಮತ್ತೋರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಹಲವು ಉಗ್ರರು ಅಡಗಿಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ ಎಂದು ವರದಿಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!