ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜೆಡಿಎಸ್ ನಾಯಕ ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ, ಜವಾಬ್ದಾರಿ ಮತ್ತು ಗೌರವ ಬರುತ್ತದೆ. ಬರುವುದು, ಹೋಗುವುದು ಮಾಡಿದರೆ ನಾಯಕತ್ವಕ್ಕೂ ಧಕ್ಕೆಯಾಗುತ್ತದೆ. ಈ ಮಾತನ್ನು ಕೇವಲ ಇಂದು ಪಕ್ಷ ಸೇರ್ಪಡೆಯಾದ ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಹೇಳುತ್ತಿಲ್ಲ, ರಾಜ್ಯದ ಸಮಸ್ತ ಕಾರ್ಯಕರ್ತರು, ಮುಖಂಡರಿಗೆ ಕಿವಿ ಮಾತು ಹೇಳುತ್ತಿದ್ದೇನೆ” ಎಂದು ತಿಳಿಸಿದರು.
ಪಕ್ಷ ಸೇರ್ಪಡೆಯಾದ ಆಯನೂರು ಮಂಜುನಾಥ್ ಅವರು ಬಿಜೆಪಿಗೆ ಹೋದರು, ಜೆಡಿಎಸ್ ಸೇರಿದರು ಆದರೆ ಕಾಂಗ್ರೆಸ್ ಪಕ್ಷದ ಬಗೆಗಿನ ಒಲವು ಅವರನ್ನು ಮತ್ತೆ ಕರೆತಂದಿದೆ. ಎಲ್ಲಾ ನದಿಗಳು ಸಮುದ್ರ ಸೇರಿದಂತೆ ಎಲ್ಲರೂ ಕಾಂಗ್ರೆಸ್ ಸೇರಲೇ ಬೇಕು, ನಮ್ಮ ಪಕ್ಷ ಸಮುದ್ರ ಇದ್ದಂತೆ.
ನಮ್ಮ ಪಕ್ಷ ಸೇರುವವರಿಗೆ ಯಾವುದೇ ಸ್ಥಾನಮಾನ ನೀಡುತ್ತೇವೆ ಎನ್ನುವ ಭರವಸೆ ನೀಡಿಲ್ಲ. ಅವರ ಶಕ್ತಿ, ಸಂಘಟನಾ ಸಾಮರ್ಥ್ಯ ನೋಡಿ ಪರಿಗಣಿಸಲಾಗುವುದು. ಯಾರು ಪಕ್ಷದ ಬೆಳವಣಿಗೆಗೆ ತಳಮಟ್ಟದಿಂದ ಕೆಲಸ ಮಾಡಿರುತ್ತಾರೆ ಅವರಿಗೆ ಮೊದಲ ಆದ್ಯತೆ, ಹೊಸದಾಗಿ ಬಂದಿರುವವರು ಹಳಬರನ್ನು ತಳ್ಳಿ ಮುಂದೆ ಬರಲು ಈ ಡಿ.ಕೆ.ಶಿವಕುಮಾರ್ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.