ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಮಂಡಲದ ವಿಶೇಷ ಅಧಿವೇಶನದ ಆರಂಭದಲ್ಲೇ ‘ವಂದೇ ಮಾತರಂ’ ಗೀತೆಯ ವಿಚಾರ ಭರ್ಜರಿ ಕಿಡಿ ಹೊತ್ತಿಸಿದೆ.
ವಿಶೇಷ ಅಧಿವೇಶನದಲ್ಲಿ ಗೀತೆಯ ಎರಡು ಚರಣಗಳನ್ನು ಮಾತ್ರ ಅಧಿಕೃತವಾಗಿ ಹಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದಾಗಿ ಅವರು ಹೇಳಿದ್ದಾರೆ.
ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಪ್ರಲ್ಹಾದ್ ಜೋಶಿ, ‘ವಂದೇ ಮಾತರಂ’ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ. ಇದು ರಾಷ್ಟ್ರಗೀತೆಯ ಗೌರವಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಈ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತುವುದಾಗಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಕ್ರಮವನ್ನು ಅವರು ತೀವ್ರವಾಗಿ ವಿರೋಧಿಸಿದ್ದು, ಕರ್ನಾಟಕದಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ಆದೇಶ
ರಾಜ್ಯ ಸರ್ಕಾರದ ಸೆಪ್ಟೆಂಬರ್ 8ರ ಆದೇಶದ ಪ್ರಕಾರ, ಸಾಮಾನ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಹಾಡುವಂತೆ ಸೂಚಿಸಲಾಗಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಗೀತೆಯನ್ನು ಹಾಡಲು ಅವಕಾಶವಿದೆ. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲೂ ಅರ್ಜಿ ಸಲ್ಲಿಕೆಯಾಗಿದೆ.
ವಂದೇ ಮಾತರಂ ಗಾಯನದ ವಿಚಾರ ಇದೀಗ ವಿಧಾನಮಂಡಲದ ಗದ್ದಲದಿಂದ ಸಂಸತ್ತಿನ ಚರ್ಚೆಯತ್ತ ಸಾಗುವ ಸಾಧ್ಯತೆ ಇದ್ದು, ರಾಜ್ಯ ಸರ್ಕಾರದ ಆದೇಶದ ಕಾನೂನುಬದ್ಧತೆ ಕುರಿತ ವಿಚಾರವೂ ಮುಂದಿನ ದಿನಗಳಲ್ಲಿ ಗಮನ ಸೆಳೆಯಲಿದೆ.



