ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೀನಿಯರ್ ಮೇಲೆ ಜೂನಿಯರ್ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕುಂಭಕೋಣಂ ಬಳಿಯ ಸರ್ಕಾರಿ ಕಾಲೇಜಿನಲ್ಲಿ 12 ನೇ ತರಗತಿಯ ವಿದ್ಯಾರ್ಥಿಯ ಮೇಲೆ 11ನೇ ತರಗತಿಯ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಡಿಸೆಂಬರ್ 4 ರಂದು ಪತ್ತೀಶ್ವರಂನಲ್ಲಿರುವ ಸರ್ಕಾರಿ ಅರಿಗ್ನಾರ್ ಅಣ್ಣಾ ಮಾಡೆಲ್ ಹೈಯರ್ ಸೆಕೆಂಡರಿ ಶಾಲೆಯ 11ನೇ ತರಗತಿಯ ಹದಿನಾಲ್ಕು ವಿದ್ಯಾರ್ಥಿಗಳು ತಮ್ಮ ಹಿರಿಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿ ವಿದ್ಯಾರ್ಥಿಗಳು ಕೋಲಿನಿಂದ ತಲೆಗೆ ಹೊಡೆದಿದ್ದು, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದ ಕೂಡಲೇ ವಿದ್ಯಾರ್ಥಿಯ ಪೋಷಕರು ಶಾಲೆಗೆ ಧಾವಿಸಿ ಕುಂಭಕೋಣಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ತಂಜಾವೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಅವನ ಮೆದುಳಿನಲ್ಲಿನ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆ ನಡೆಸಬೇಕಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಭಾನುವಾರ ಬೆಳಗಿನ ಜಾವ 2.30ರ ಸುಮಾರಿಗೆ ಮೃತಪಟ್ಟಿದ್ದಾನೆ. 14 ಆರೋಪಿಗಳನ್ನು ಬಂಧಿಸಿ ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ.
ಆರಂಭದಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾಗಿ ಪಟ್ಟೀಶ್ವರಂ ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ, ನಾವು ಅದನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸುತ್ತೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುತ್ರನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

