ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿವೈ ಚಂದ್ರಚೂಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಅಧಿಕಾರ ತ್ಯಜಿಸಿದ ನಂತರ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಬುಧವಾರ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಭಾರತದ ಸರ್ವೋಚ್ಚ ನ್ಯಾಯಾಲಯದ ಅತ್ಯಂತ ಹಿರಿಯ ನ್ಯಾಯಾಧೀಶ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಬುಧವಾರ ದೇಶದ ನ್ಯಾಯಾಂಗದ 50 ನೇ ಮುಖ್ಯ ನ್ಯಾಯಮೂರ್ತಿಯಾದರು.ನವೆಂಬರ್ 10, 2024 ರವರೆಗೆ ಎರಡು ವರ್ಷಗಳ ಕಾಲ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ ನ್ಯಾಯಮೂರ್ತಿ ವೈವಿ ಚಂದ್ರಚೂಡ್ ಅವರು ಫೆಬ್ರವರಿ 2, 1978 ರಿಂದ ಜುಲೈ 11, 1985 ರವರೆಗೆ ಭಾರತದ 16 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾಯಾಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತಂದೆ ಮತ್ತು ಮಗ ಸಿಜೆಐ ಆಗಿದ್ದಾರೆ.

ನವೆಂಬರ್ 11, 1959 ರಂದು ಜನಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು. ಸುಪ್ರೀಂ ಕೋರ್ಟ್‌ಗೆ ನೇಮಕಗೊಳ್ಳುವುದಕ್ಕೂ ಮುನ್ನ ಅಲಹಾಬಾದ್ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರಾಗಿ, ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!