Thursday, August 11, 2022

Latest Posts

ಕೋವಿಡ್ ನಿಯಂತ್ರಣ: ಗಡಿ ಭಾಗದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲು‌ ಶಾಸಕ ಕೆ.ಜಿ.ಬೋಪಯ್ಯ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಮಡಿಕೇರಿ ತಾಲೂಕಿನ ಗಡಿ ಭಾಗದಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಿಡಿಒಗಳು, ಆಶಾ ಕಾರ್ಯಕರ್ತೆಯರು ಹಾಗೂ ವಿಲೇಜ್ ನರ್ಸ್ ಗಳು ಕೋವಿಡ್ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು, ಕಂದಾಯ ಹಾಗೂ ಪೊಲೀಸ್ ಇಲಾಖೆಯವರು ಮುಂದಿನ ದಿನಗಳಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಮತ್ತಷ್ಟು ಮುತುವರ್ಜಿ ವಹಿಸಬೇಕಿದೆ ಎಂದರು.
ಮಡಿಕೇರಿ ತಾಲೂಕಿನ ಕರಿಕೆ ಮತ್ತು ಸಂಪಾಜೆ ಗೇಟ್ ಬಳಿ ಮತ್ತು ಗಡಿ ಗ್ರಾಮ ಪಂಚಾಯತ್ ಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಕೇರಳದಿಂದ ಬರುವ ಜನರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು. ಮೂರನೇ ಅಲೆಯ ಮುನ್ಸೂಚನೆ ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಕೆ.ಜಿ.ಬೋಪಯ್ಯ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಿ ಅವರು ಮಾತನಾಡಿ, ಕೇರಳದಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿರುವುದರಿಂದ ಕೊಡಗು ಮತ್ತು ಕೇರಳ ಗಡಿಭಾಗಗಳಲ್ಲಿ ಹೆಚ್ಚಿನ ಗಮನಹರಿಸಬೇಕಿದೆ. ಹಾಗೂ ಕೇರಳ ಜನರು ಬಂಟ್ವಾಳ, ಮಂಗಳೂರು ಮಾರ್ಗವಾಗಿ ಜಿಲ್ಲೆಗೆ ಬರುವ ಸಾಧ್ಯತೆಗಳು ಅಧಿಕವಾಗಿದ್ದು ಸಂಬಂಧಪಟ್ಟ ವಾಹನಗಳನ್ನು ಪರಿಶೀಲಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮಾತನಾಡಿ,ಕೇರಳದಲ್ಲಿ ಝೀಕಾ ವೈರಸ್ ಹೆಚ್ಚುತ್ತಿರುವುದರಿಂದ ಕೇರಳದಿಂದ ಬರುವ ಜನರನ್ನು ಪರೀಕ್ಷೆಗೆ ಒಳಪಡಿಸಿ 14 ದಿನಗಳ ಕಾಲ ಪ್ರತ್ಯೇಕ ವಾಸಕ್ಕೆ ಒಳಪಡಿಸಬೇಕು ಎಂದು ತಿಳಿಸಿದರು.
ಕೋವಿಡ್ ಸೋಂಕಿತರ ವರದಿಯನ್ನು ಸಂಗ್ರಹಿಸುವಾಗ ಪ್ರಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಸ್ವಾಬ್ ಪರೀಕ್ಷೆಗೆ ಒಳಪಡಿಸಬೇಕು ಎಂದರು.
ತಾ.ಪಂ.ಇಒ ಶೇಖರ್ ಅವರು ಮಾತನಾಡಿ, ಹಳ್ಳಿಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದಲ್ಲಿ ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದು ಮೊಬೈಲ್ ವಾಹನದ ಮೂಲಕ ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಮಹೇಶ್, ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss