November 24, 2026
Tuesday, November 24, 2026
spot_img

ಕಲಬುರಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ

ಹೊಸದಿಗಂತ ವರದಿ ಕಲಬುರಗಿ:

ಜಿಲ್ಲಾ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ 48 ಜಿಲ್ಲಾ ಪಂಚಾಯಿತಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಮೀಸಲಾತಿಯ ಅಂತಿಮ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನವೆಂಬರ್ 23ರಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಈ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 162ರ ಅಡಿಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ನಡೆಯುವ ಜಿಲ್ಲಾ ಪಂಚಾಯಿತಿ ಸಾಮಾನ್ಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ನಿಗದಿಪಡಿಸಲಾಗಿದೆ.

ಈ ಹಿಂದೆ ಅಕ್ಟೋಬರ್ 9ರಂದು ಕರಡು ಅಧಿಸೂಚನೆ ಪ್ರಕಟಿಸಿ, ಸಾರ್ವಜನಿಕರಿಂದ 10 ದಿನಗಳೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸಿ ವಿಲೇವಾರಿ ಮಾಡಿದ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಅಂತಿಮ ಮೀಸಲಾತಿ ಪಟ್ಟಿಯಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ ‘ಅ’, ಹಿಂದುಳಿದ ವರ್ಗ ‘ಬ’ ಹಾಗೂ ಸಾಮಾನ್ಯ ವರ್ಗಗಳಿಗೆ ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರಿಗೂ ಮೀಸಲಾತಿ ಕಲ್ಪಿಸಲಾಗಿದೆ.
ಅವರಾದ (ಬಿ), ಕುಸನೂರ, ಆಂದೋಲಾ, ನರೋಣಾ, ನಿಂಬರ್ಗಾ, ಚಿಮ್ಮನಚೋಡ, ಸುಲೇಪೇಟ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ನೀಡಲಾಗಿದೆ. ನೆಲೋಗಿ, ಜಿಡಗಾ, ಮುಧೋಳ, ನಿಡಗುಂದಾ, ರಾವೂರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ.

ಒಟ್ಟು 48 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಅಂತಿಮಗೊಂಡಿರುವುದರಿಂದ ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಆಕಾಂಕ್ಷಿಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಲು ವೇದಿಕೆ ಸಿದ್ಧವಾದಂತಾಗಿದೆ.

Must Read