ಹೊಸದಿಗಂತ ವರದಿ, ಪುತ್ತೂರು:
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜ.21ರಂದು ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ವಿರುದ್ಧ ದಾಖಲಾಗಿರುವ ಕೇಸ್‌ಗೆ ಸಂಬಂಧಿಸಿ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಹೈಕೋರ್ಟ್ ಪೊಲೀಸ್ ಇಲಾಖೆಗೆ ಸೂಚಿಸಿದೆ .
ಪುತ್ತೂರಿನ ವಿವೇಕಾನಂದ ಕಾಲೇಜ್‌ನಲ್ಲಿ ಜ.12ರಂದು ನಡೆದಿದ್ದ ವಿವೇಕ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ಆರೋಪದಡಿಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಆರ್‌ಎಸ್‌ಎಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಿದ ವಿಕಸನ ಟಿ.ವಿ. ಮತ್ತು ಕಾರ್ಯಕ್ರಮ ಆಯೋಜಿಸಿದ್ದ ಆಯೋಜಕರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು ಹಾಗೂ ಹದಿ ಹರೆಯದ ಬಾಲಕ ಬಾಲಕಿಯರು ಭಾಗವಹಿಸಿದ್ದ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ. ದ್ವೇಷ ಭಾಷಣದಲ್ಲಿ ಮುಸಲ್ಮಾನರ ಮತ್ತು ಕ್ರೈಸ್ತರ ಮೇಲೆ ಹಿಂಸೆ ಮಾಡಲು ಪ್ರಚೋದಿಸಿದ್ದಾರೆ. ಇದು ಅಲ್ಲಿ ಸೇರಿರುವ ಸಭಾಸದರಿಗೆ, ಅದರಲ್ಲೂ ಮುಖ್ಯವಾಗಿ ಎಳೆಯ ಪ್ರಾಯದ ವಿದ್ಯಾರ್ಥಿಗಳಿಗೆ ಹಾಗೂ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಿದ ಸಾವಿರಾರು ಜನರಿಗೆ ಮುಸಲ್ಮಾನ ಮತ್ತು ಕ್ರೈಸ್ತ ಜನಾಂಗದ ಮೇಲೆ ದ್ವೇಷ ಹುಟ್ಟುವಂತೆ ದ್ವೇಷ ಭಾಷಣ ಮಾಡಿ, ಹಿಂಸೆಯನ್ನು ಪ್ರಚೋದಿಸಿದ್ದಾರೆ. ದ್ವೇಷ ಭಾಷಣ ಮಾಡದಂತೆ ನ್ಯಾಯಾಲಯ ಷರತ್ತು ವಿಧಿಸಿದ್ದರೂ, ಅದನ್ನು ಉಲ್ಲಂಘಿಸಿ, ಈಗ ಪುನಃ ದ್ವೇಷ ಭಾಷಣ ಮಾಡುವುದರ ಮೂಲಕ ಸಮಾಜದಲ್ಲಿ ದ್ವೇಷ, ಮತ್ತು ಹಿಂಸೆಯನ್ನು ಪ್ರೇರೇಪಿಸುವ ಕೆಲಸವನ್ನು ಮಾಡಿದ್ದಾರೆ. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ದ್ವೇಷ ಭಾಷಣ ಮಾಡಿದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಈ ದ್ವೇಷ ಭಾಷಣವನ್ನು ಪ್ರಸಾರ ಮಾಡಿದ ವಿಕಸನ
ಯೂಟ್ಯೂಬ್ ಚಾನಲ್ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಂಡು ನ್ಯಾಯ ಒದಗಿಸಿಕೊಡಬೇಕು ಎಂದು ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ತಾಲೂಕು ಸಮಿತಿ ಅಧ್ಯಕ್ಷ ರಾಮಚಂದ್ರ ಕೆ. ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಕುರಿತು ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಮತ್ತು ಈ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್ ವಿಕಸನ ಟಿವಿ ಮತ್ತು ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ಮೇಲೆ ಪ್ರಕರಣ ದಾಖಲಾಗಿತ್ತು.
ತಮ್ಮ ಮೇಲೆ ಕೇಸು ದಾಖಲಿಸಿರುವುದನ್ನು ಪ್ರಶ್ನಿಸಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಪ್ರಕರಣಕ್ಕೆ ಸಂಬಂಧಿಸಿ ಡಾ. ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಮತ್ತು ತ್ವರಿತ ಕ್ರಮ ಕೈಗೊಳ್ಳದಂತೆ ಪೊಲೀಸ್ ಇಲಾಖೆಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಫೆ.5ಕ್ಕೆ ಮುಂದೂಡಿದ್ದಾರೆ.
ಡಾ. ಪ್ರಭಾಕರ್ ಭಟ್ ಪರ ಹೈಕೋರ್ಟ್ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು. ನ್ಯಾಯವಾದಿ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.


