ಹೊಸದಿಗಂತ ವರದಿ ಚಿತ್ರದುರ್ಗ:
ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಜಯಭೇರಿ ಬಾರಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರ ಮದಕರಿ ನಾಯಕ ವೃತ್ತದಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆದ್ದು ಬೀಗಿದೆ. ಐದು ರಾಜ್ಯಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅಸ್ಸಾಂ, ಪುದುಚೇರಿ ಹಾಗೂ ಪಶ್ಚಿಮಬಂಗಾಳ ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಫಲಿತಾಂಶ ಪಡೆದಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಉತ್ತಮ ಆಡಳಿತ ಫಲವಾಗಿದೆ ಎಂದು ಹೇಳಿದರು.
ಒಂದು ಕಾಲದಲ್ಲಿ ಕೇವಲ ಬೆರಳೆಣಿಕೆಯ ಸ್ಥಾನದಲ್ಲಿ ಗೆಲ್ಲುತ್ತಿದ್ದ ಬಿಜೆಪಿ ಇಂದು ಅತಿಹೆಚ್ಚು ಸದಸ್ಯರನ್ನು ಹೊಂದಿರುವ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ. ಇದರ ಹಿಂದೆ ಸಾಕಷ್ಟು ನಾಯಕರ ಪರಿಶ್ರಮವಿದೆ. ಅಭಿವೃದ್ಧಿಗೆ ಒತ್ತು ನೀಡುವ ಬಿಜೆಪಿ ಕೇಂದ್ರದಲ್ಲಿ ಮೂರನೇ ಅವಧಿಗೆ ಅಧಿಕಾರ ಹಿಡಿದು ಆಡಳಿತ ನಡೆಸುತ್ತಿದೆ. ಹಾಗಾಗಿ ದೇಶದ ಜನ ಮಾತ್ರವಲ್ಲ, ರಾಜ್ಯದ ಜನರೂ ಸಹ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೇಸ್‌ನ ದುರಾಡಳಿತದಿಂದ ಬೇಸತ್ತ ಜನರು ಇಂದು ಬಿಜೆಪಿ ಬೆಂಬಲಿಸಿದ್ದಾರೆ. ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವನ್ನು ಪಡೆದಿದ್ದು, ಮಮತಾ ಬ್ಯಾನರ್ಜಿಯವರ ಆಡಳಿತಕ್ಕೆ ಮುಕ್ತಾಯ ಹಾಡಿದೆ. ಅದರಂತೆ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ರಾಜ್ಯ ರೈತ ಮೋರ್ಚ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ಉಪಾಧ್ಯಕ್ಷೆ ಭಾರತಿ ಮಲ್ಲಿಕಾರ್ಜುನ್, ರೈತ ಮೋರ್ಚ ಕಾರ್ಯಾಲಯ ಕಾರ್ಯದರ್ಶಿ ಲಿಂಗನಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮಡಪ್ಪ, ರಾಜ್ಯ ಒಬಿಸಿ ಮೋರ್ಚ ಅಧ್ಯಕ್ಷ ರಘು ಕೌಟಿಲ್ಯ, ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ ಗುಂಡಾರ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗಿರೀಶ್, ರೈತ ಮೋರ್ಚ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಜಿ.ಪಂ. ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಶ್ಯಾಮಲಾ ಶಿವಪ್ರಕಾಶ್, ಬಸಮ್ಮ, ರೇಖಾ, ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್ ಸೇರಿದಂತೆ ನೂರಾರು ಸಂಖ್ಯೆಯ ಕಾರ್ಯಕರ್ತರು ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನೆರೆದಿದ್ದ ಜನರಿಗೆ ಸಹಿ ವಿತರಣೆ ಮಾಡಲಾಯಿತು.



