ಸಾಂಸ್ಕೃತಿಕ ನಗರಿಯಲ್ಲಿ ಕನ್ನಡ ಕಲರವ, ಸಂಭ್ರಮದ ರಾಜ್ಯೋತ್ಸವ

ಮೈಸೂರು:

ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ, ಇಲ್ಲಿನ ಆಚರಣೆ ಎಲ್ಲವೂ ಅನನ್ಯವಾಗಿದ್ದು ವಿಶ್ವಮಾನ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಧರ್ಮ ಸಹಿಷ್ಣತೆ, ಸಮನ್ವಯತೆ, ಸೌಹಾರ್ದತೆಯಿಂದ ಬದುಕುತ್ತಿರುವ ನಾಡು ನಮ್ಮದು. ಕನ್ನಡ ಭಾಷೆ ಅತ್ಯಂತ ಶ್ರೀಮಂತ ಸಾಹಿತ್ಯ ಹೊಂದಿದ್ದು, ಕನ್ನಡದ 8 ಜನ ಸಾಹಿತ್ಯ ಪರಿಚಾರಕರು, ಸಾಹಿತ್ಯದ ಅತ್ಯುನ್ನತ ಪ್ರಶಸ್ತಿಯಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವುದು ಹೆಮ್ಮೆಯ ವಿಷಯವಾಗಿದೆ. ಇಡೀ ದೇಶದಲ್ಲೇ 2 ನೇ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಭಾಷೆ ನಮ್ಮ ಕನ್ನಡ ಭಾಷೆ ಎಂದರು.

ಭಾರತೀಯ ಭಾಷೆ ಮತ್ತು ಸಾಹಿತ್ಯಗಳಲ್ಲಿ ಉನ್ನತ ಶ್ರೇಣಿಯಲ್ಲಿ ಇರುವ ಚೆಲುವ ಕನ್ನಡ ಭಾಷೆಗೆ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಕರ್ನಾಟಕದ ಸ್ಥಾನ ಇಂದು ಭಾರತದ ಅಭಿವೃದ್ಧಿ ನಕ್ಷೆಯಲ್ಲಿ ಅಗ್ರ ಪಂಕ್ತಿಯಲ್ಲಿದೆ. ಭಾರತದ ಒಟ್ಟಾರೆ ಆರ್ಥಿಕ ವರಮಾನದಲ್ಲಿ ಕರ್ನಾಟಕದ್ದೇ ಸಿಂಹಪಾಲು. ಮಾಹಿತಿ ತಂತ್ರಜ್ಞಾನದ ದಿಗ್ಗಜರು ನಾವು. ಶೈಕ್ಷಣಿಕವಾಗಿ ರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿರುವ ನಾಡು ನಮ್ಮದು. ವಿಜ್ಞಾನಿಗಳ ಕರ್ಮಭೂಮಿ ನಮ್ಮ ಕರ್ನಾಟಕ ಎಂದರು.

ಪ್ರಸ್ತುತ ಜಾಗತೀಕರಣದ ಹಿನ್ನೆಲೆಯಲ್ಲಿ ಇಂಗ್ಲಿಷ್ ಭಾಷಾ ಜ್ಞಾನ ಅವಶ್ಯಕವಾಗಿದ್ದರೂ ಎಂದಿಗೂ ಮಾತೃ ಭಾಷೆ ಕನ್ನಡಕ್ಕೆ ಮೊದಲ ಆದ್ಯತೆ. ನಮ್ಮ ಶಿಕ್ಷಣ ನೀತಿಯೂ ಮಾತೃ ಭಾಷೆಗೆ ಹೆಚ್ಚಿನ ಒತ್ತನ್ನು ನೀಡಿದ್ದರೂ ಕನ್ನಡ ಭಾಷೆಯನ್ನು ಉಳಿಸಿಕೊಳ್ಳುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಸರ್ಕಾರ ಕೈಗೊಂಡಿದ್ದು, ಕನ್ನಡ ಭಾಷೆಯ ಸೊಗಡನ್ನು ಉಳಿಸಿಕೊಂಡು ಅದನ್ನು ಇನ್ನೂ ಹೆಚ್ಚಿಸುವ ಕೆಲಸದಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಮೂಲಕ ಕನ್ನಡ ನಾಡು ನುಡಿ ಸಂಸ್ಕೃತಿ ಭಾಷೆಯ ಸಿರಿಯನ್ನು ಹೆಚ್ಚಿಸಿ ಪಸರಿಸುವ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರಾಜ್ಯೋತ್ಸವ ಸಂದರ್ಭದಲ್ಲಿ ಆಯೋಜಿಸಲಾದ ‘ಮಾತಾಡ್ ಮಾತಾಡ್ ಕನ್ನಡ’ ಕೋಟಿ ಕಂಠ ಗಾಯನದಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂಪೂರ್ಣ ಕನ್ನಡಮಯ ವಾತಾವರಣವನ್ನು ಸೃಷ್ಟಿಸಲಾಗಿದೆ.

ಈ ವರ್ಷ ದೇಶಕ್ಕೆ ಸ್ವಾತಂತ್ರ‍್ಯ ಲಭಿಸಿ 75 ವರ್ಷ ಪೂರ್ಣಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಈ ಅಮೃತ ಮಹೋತ್ಸವವನ್ನು ದೇಶಾದ್ಯಂತ ಒಂದು ವರ್ಷ ಕಾಲ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ವಿವಿಧ ಜನಪರ, ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರೂ ಕೂಡ ಇದಕ್ಕೆ ಕೈಜೋಡಿಸಿರುವುದು ರಾಷ್ಟ್ರಪ್ರೇಮ ಮತ್ತು ಕಲ್ಯಾಣದ ದ್ಯೋತಕವಾಗಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮರ್ಥ ನಾಯಕತ್ವದಲ್ಲಿ ನಮ್ಮ ರಾಜ್ಯ ಅಭಿವೃದ್ಧಿಯ ಹೊಸ ಮನ್ವಂತರಕ್ಕೆ ತೆರೆದುಕೊಳ್ಳುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದು. ಸುಶಿಕ್ಷಿತ, ಸುಸಂಸ್ಕೃತ ಸಮಾಜವನ್ನು ಕಟ್ಟಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ನುಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!