ಭಾಲ್ಕಿ ಪಟ್ಟಣದಲ್ಲಿ ಕನ್ನಡ ಧ್ವಜ ಸ್ತಂಭ ಧ್ವಂಸ: ಕ್ರಮಕ್ಕೆ ಕರವೇ ಆಗ್ರಹ

ಹೊಸ ದಿಗಂತ ವರದಿ, ಬೀದರ್:

ಭಾಲ್ಕಿ ಪಟ್ಟಣದಲ್ಲಿ ಕನ್ನಡ ಧ್ವಜ ಸ್ತಂಭ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಆಗ್ರಹಿಸಿದ್ದಾರೆ.
ಯಾರೋ ಕಿಡಿಗೇಡಿಗಳು ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದ ಎದುರಿನ ಕನ್ನಡ ಧ್ವಜ ಸ್ತಂಭವನ್ನು ಕತ್ತರಿಸಿ ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಕನ್ನಡ ಧ್ವಜ ಸ್ತಂಭವು ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿದೆ. ಅದನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳ ಕೃತ್ಯ ಅಕ್ಷಮ್ಯವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಧ್ವಜ ಸ್ತಂಭ ಧ್ವಂಸದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಕರಣದಲ್ಲಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು. ಧ್ವಜ ಸ್ತಂಭ ಮರು ನಿರ್ಮಾಣ ಮಾಡಬೇಕು. ಈ ರೀತಿಯ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಕರಣದ ಸಂಬಂಧ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!