ನಮ್ಮ ರಾಜ್ಯದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದಲ್ಲಿ ಉತ್ಪಾದನೆ ಮತ್ತು ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಮೇಲೆ ಇಂಗ್ಲಿಷ್ ಜೊತೆಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ.

ಈ ಸಂಬಂಧ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಲೇಬಲ್‌ನಲ್ಲಿ ಉತ್ಪನ್ನದ ಹೆಸರು, ಬಳಕೆ ನಿರ್ದೇಶನ ಸೇರಿದಂತೆ ಎಲ್ಲವೂ ಬೇರೆ ಭಾಷೆಯ ಜೊತೆಗೆ ಕನ್ನಡದಲ್ಲಿಯೂ ಇರಬೇಕೆಂದು ತಿಳಿಸಿದೆ.

ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ.

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!