ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ 700 ಮಕ್ಕಳೂ ಸೇರಿ 1,700 ಶಾಲಾ ಮಕ್ಕಳು ಭಾಗಿಯಾಗುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗುರುವಾರ ಹೇಳಿದರು.
ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಸಚಿವರು ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಲಾ ಶಿಕ್ಷಣ ಸಚಿವನಾಗಿ ಇದು ನನ್ನ ಮೂರನೇ ಕನ್ನಡ ರಾಜ್ಯೋತ್ಸವ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ ರೂಪಿಸಲಾಗಿದೆ. ಕಳೆದ ಬಾರಿ 1100 ಮಕ್ಕಳು ಭಾಗಿಯಾಗಿದ್ದು, ಅದರಲ್ಲಿ 300 ಮಂದಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಾಗಿದ್ದರು. ಈ ಬಾರಿ 1, 700 ಮಕ್ಕಳು ಭಾಗವಹಿಸಲಿದ್ದಾರೆ, ಅವರಲ್ಲಿ 700 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾಗಿರಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲ ಮಕ್ಕಳಿಗೂ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಿದರು.
ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉಪಸ್ಥಿತರಿರಲಿದ್ದಾರೆ.

