ದಿಗಂತ ವರದಿ ಮಂಡ್ಯ :
ಕನ್ನಡಿಗರಿಗೆ ಉದ್ಯೋಗ ಮಸೂದೆಯನ್ನು ಪ್ರಸಕ್ತ ಅಧಿವೇಶನದಲ್ಲಿಯೇ ಮಂಡಿಸುವಂತೆ ಒತ್ತಾಯಿಸಿ ಕನ್ನಡ ಸೇನೆ ಕಾರ‌್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ‌್ಯಕರ್ತರು, ಕೆಲ ಕಾಲ ರಸ್ತೆಯಲ್ಲೇ ಮಲಗಿ ಸಂಚಾರಕ್ಕೆ ಅಡ್ಡಿಪಡಿಸಿದರು. ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿತ್ತು. ಆದರೆ, ಖಾಸಗಿ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳು ಸಂಪುಟದಲ್ಲಿ ತೀರ್ಮಾನಿಸಿದ ಕಾಯ್ದೆಯನ್ನು ಸದನದಲ್ಲೇ ಮಂಡಿಸಿ ವಿರೋಧ ಮಾಡುತಿತರುವ ಕಾರ್ಪೋರೇಟ್ ವಲಯದವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಒತ್ತಾಯಿಸಿದರು.