ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ: ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಕ್ರಮ ಎಂದ ಸಚಿವೆ ಹೆಬ್ಬಾಳ್ಕರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಪೈಶಾಚಿಕ ಕೃತ್ಯವಾಗಿದ್ದು ಅತ್ಯಂತ ಖಂಡನೀಯ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಈ ಕುರಿತು ನನಗೆ ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಪೊಲೀಸರಿಗೆ ದಿಟ್ಟತನದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಡ ಘಟನೆ ಸಂಬಂಧಿಸಿದಂತೆ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಘಟನೆ ಸಂಬಂಧ ಯಾರೇ ಆಗಲಿ, ಯಾವುದೇ ಧರ್ಮದವರಾಗಲಿ ತಪ್ಪು ಮಾಡಿದರೆ, ತಕ್ಕ ಶಿಕ್ಷೆ ನೀಡುವುದಕ್ಕೆ ನಮ್ಮ ಪೊಲೀಸರಿಗೆ ಯಾವುದೇ ಹಿಂಜರಿಕೆಯಿಲ್ಲ. ದಿಟ್ಟ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಸಂತ್ರಸ್ತ ಯುವತಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಗೆ ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಿದ್ದು, ಎಲ್ಲ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!