ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ರೆ ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯನ್ನು ಸರ್ಕಾರ ಕೂಡಲೇ ಪರಿಗಣಿಸಬೇಕು, ಯಾವ ಸರ್ಕಾರ ಕೂಡ ಅವರ ಸಮಸ್ಯೆ ಆಲಿಸಿಲ್ಲ. ಅವರ 36 ತಿಂಗಳ ಸಂಬಳ ಕೊಟ್ಟು ಬಿಡಿ, ಸಚಿವ ರಾಮಲಿಂಗಾರೆಡ್ಡಿ ಅವರು ಕೂಡಲೇ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ರೆ ನಾವು ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡುತ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಮೈಸೂರು, ಹುಬ್ಬಳ್ಳಿ ಬೆಳಗಾವಿ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುತೇಕ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಆದರೆ ಇನ್ನೂ ಕೆಲವು ನೌಕರರು ಎಸ್ಮ ಜಾರಿ, ಕೋರ್ಟ್ ಆದೇಶ ಹಾಗೂ ಅಮಾನತ್ತಿನ ಆತಂಕ ಇರುವುದರ ಹಿನ್ನೆಲೆಯಲ್ಲಿ ಕೆಲವು ನೌಕರರು ಮುಷ್ಕರದಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.