ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಬಿಸಿ ಬೆಂಗಳೂರಿನಲ್ಲಿ ಹೆಚ್ಚು ತಟ್ಟಿಲ್ಲ. ಬಸ್, ಆಟೋ ಸೇವೆಗಳು ಎಂದಿನಂತೆ ಸಾಗಿವೆ. ಕೆಲವು ಪ್ರದೇಶಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ ಇಲ್ಲಿದೆ ಡೀಟೇಲ್ಸ್.
ಮೆಟ್ರೋ ನಿಲ್ದಾಣಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ ಕಾರಣ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಬೆಳಗಾವಿಯಲ್ಲಿ ಬಂದ್ ಬಿಸಿ ಕಾಣಿಸಿಲ್ಲ. ನಗರದಲ್ಲಿ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆದಿವೆ.
ದಾವಣಗೆರೆಯಲ್ಲಿ ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ. ಬಸ್, ಆಟೋಗಳ ಸಂಚಾರ ಎಂದಿನಂತೆ ಆರಂಭ. ಅಹಿತಕರ ಘಟನೆ ನಡೆಯದಂತೆ ಪೋಲೀಸರ ಕಟ್ಟೆಚ್ಚರ.
ಮಂಡ್ಯದ ಸಂಜಯ್ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ರಸ್ತೆಯಲ್ಲಿಯೇ ಮಲಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ. ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲ ವ್ಯಕ್ತ. ಹೋಟೆಲ್ ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರ ಸಂಘ, ಮೈಸೂರು ಜಿಲ್ಲಾ ವಕೀಲರ ಸಂಘ ಸೇರಿ ಹಲವರಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ.