ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮರು ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದರ ಬೆನ್ನಲ್ಲೇ ಸಿಐಡಿ ಸಹ ಸರ್ಕಾರದ ಆದೇಶದಂತೆ ಕರ್ಭೀಕರ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿದೆ. ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, “ಬಿಟ್ ಕಾಯಿನ್ ಪ್ರಕರಣ ಮರು ತನಿಖೆಗೆ ಅದೇಶಿಸಿದ್ದೇವೆ. ಸಿಐಡಿ ಅಡಿಯಲ್ಲಿ ಎಸ್ಐಟಿ ರಚನೆ ಮಾಡಿದ್ದೇನೆ. ಆದರೆ ತನಿಖೆ ನಿಗದಿತ ಸಮಯದಲ್ಲಿ ಮುಗಿಯಲಿದೆ ಎಂದು ಹೇಳಲು ಬರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಹಗರಣ ನಡೆದಿತ್ತು. 2020ರಲ್ಲಿ ಬಿಟ್ ಕಾಯಿನ್ ಹಗರಣ ಸಂಬಂಧ ಬೆಂಗಳೂರಿನ ಕಾಟನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದರಿ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವ ಶಂಕೆ ಇದ್ದು, ಹೆಚ್ಚಿನ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರು ಸಿಐಡಿ ಡಿಜಿಪಿ ಎಂಎ ಸಲೀಂ ಅವರಿಗೆ ಪತ್ರ ಬರೆದಿದ್ದರು. ಬಳಿಕ ಅಲೋಕ್ ಮೋಹನ್ ಪತ್ರದ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಈಗ ಸರ್ಕಾರ ಮರು ತನಿಖೆಗೆ ಆದೇಶ ನೀಡಿದೆ.