ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳ–ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದ ಬಳಿಕ ಕರ್ನಾಟಕದ 13 ಮಂದಿ ಇನ್ನೂ ಪತ್ತೆಯಾಗದೆ ಇರುವುದು ಆತಂಕಕ್ಕೆ ಕಾರಣವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರದ ಅಧಿಕಾರಿಗಳು ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆಗೆ ಸಂಪರ್ಕದಲ್ಲಿದ್ದೇವೆ, ಸಾಧ್ಯವಾದಷ್ಟು ಬೇಗ ಪತ್ತೆಹಚ್ಚಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.
28 ಮಂದಿಯ ಪೈಕಿ ಹಲವರು ಪತ್ತೆ
ಸರ್ಕಾರದ ಪ್ರಾಥಮಿಕ ಮಾಹಿತಿಯ ಪ್ರಕಾರ, ನೇಪಾಳ ಮತ್ತು ಟಿಎಆರ್‌ನಲ್ಲಿ ಸಿಲುಕಿಕೊಂಡಿರುವ ಅಥವಾ ಕಾಣೆಯಾದ ಕರ್ನಾಟಕದ 28 ಜನರ ವಿವರಗಳನ್ನು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವು ಸಂಗ್ರಹಿಸಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿತ್ತು. ಇವರಲ್ಲಿ ಕೆಲವರು ಸುರಕ್ಷಿತವಾಗಿರುವುದು ದೃಢಪಟ್ಟಿದ್ದು, ಉಳಿದವರನ್ನು ಪತ್ತೆಹಚ್ಚಲು ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ನೇಪಾಳದಲ್ಲಿ ಪ್ರವಾಹದ ಭೀಕರತೆ
ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸೋಮವಾರದ ವೇಳೆಗೆ ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಸುಮಾರು 4,250 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿಕೆ
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ತಂಡಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿವೆ. ಹಲವು ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ನೂರಾರು ಕಾರ್ಮಿಕರು ಸಿಲುಕಿರುವ ಶಂಕೆಯಿದ್ದು, ಅವರನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.



