ಹೊಸದಿಗಂತ ಡಿಜಿಟಲ್ ಡೆಸ್ಕ್:
3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
2022ರ ಬಳಿಕ ಅಂಡರ್-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ. ಗುರುವಾರ ಸಂಜೆ 5 ಗಂಟೆಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಿಎಂ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್, ಹಲವು ಸಚಿವರು, ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್, ಫುಟ್ಬಾಲ್, ಹಾಕಿ, ಕುಸ್ತಿ, ಜಿಮ್ನಾಸ್ಟಿಕ್ಸ್, ಶೂಟಿಂಗ್ ಸೇರಿದಂತೆ ಒಟ್ಟು 24 ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಕಂಠೀರವ ಹೊರಾಂಗಣ, ಒಳಾಂಗಣ ಸೇರಿದಂತೆ ಬೆಂಗಳೂರಿನ ವಿವಿಧ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ನ.20ರಂದು ಕ್ರೀಡಾಕೂಟ ಮುಕ್ತಾಯಗೊಳ್ಳಲಿದ್ದು, ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
2022ರ ಬಳಿಕ ಆಯೋಜನೆಗೊಳ್ಳುತ್ತಿರುವ ಮಿನಿ ಒಲಿಂಪಿಕ್ಸ್‌ಗೆ ಕರ್ನಾಟಕ ಸರ್ಕಾರ 3 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿಸಿದ ಗೋವಿಂದರಾಜು ಅವರು, ಕ್ರೀಡಾ ಇಲಾಖೆ ಸಹ ಎಲ್ಲ ನೆರವು ನೀಡುತ್ತಿದ್ದು, ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದರು.
ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಅಗ್ರ-15 ಕ್ರೀಡಾಪಟುಗಳಿಗೆ ಕಂಠೀರವ ಕ್ರೀಡಾಂಗಣದಲ್ಲಿರುವ ಕ್ರೀಡಾ ವಿಜ್ಞಾನ ಕೇಂದ್ರದ ವತಿಯಿಂದ ತಲಾ 5000 ರು. ಬಹುಮಾನ ನೀಡಲಾಗುವುದು. ಅಲ್ಲದೇ ಉತ್ತಮ ಕೌಶಲ್ಯಗಳನ್ನು ಪ್ರದರ್ಶಿಸುವ 200 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಅವರ ದೈಹಿಕ ಹಾಗೂ ಮಾನಸಿಕ ಬಲ ಹೆಚ್ಚಲು ತರಬೇತಿ ನೀಡಲಾಗುವುದು. ಈ ಶಿಬಿರದಲ್ಲಿ ಗಮನ ಸೆಳೆಯುವ ಅಗ್ರ-50 ಮಕ್ಕಳನ್ನು ಆಯ್ಕೆ ಮಾಡಿ ಅವರಿಗೆ 1 ತಿಂಗಳು ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ.