ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಭಾಗಗಳಲ್ಲಿ ಮಳೆಯ ಜೊತೆಗೆ ತೀವ್ರ ಗಾಳಿ ಬೀಸುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ಅಬ್ಬರ
ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ. ಆದರೆ, ಒಳನಾಡಿನ ಭಾಗದಲ್ಲಿ ಗಾಳಿಯ ತೀವ್ರತೆ ಹೆಚ್ಚಿರಲಿದ್ದು, ರಾಯಚೂರು, ವಿಜಯಪುರ, ಧಾರವಾಡ, ಬೆಳಗಾವಿ, ಗದಗ, ಕಲಬುರಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ.



