ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಯುತ್ತಿರುವುರಿಂದ ಸರ್ಕಾರದ ರೊಚ್ಚಿಗೆದ್ದ ರಾಜ್ಯದ ರೈತರು ಮಂಡ್ಯದ ಹಲವೆಡೆ ಇಂದೂ ಕೂಡ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಮಂಡ್ಯದ ಸಂಜಯ್ ಸರ್ಕಲ್‌ನಲ್ಲಿ ಕನ್ನಡಸೇನೆ ಕಾರ್ಯಕರ್ತರು ತಲೆ ಮೇಲೆ ಚಪ್ಪಡಿ ಕಲ್ಲು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಇಂದು ಸಹ ʻಕಾವೇರಿ ನಮ್ಮದುʼ ಕೂಗು ಹೆಚ್ಚಾಗಿದ್ದು, ನಮ್ಮ ರೈತರ ತಲೆ ಮೇಲೆ ಚಪ್ಪಡಿ ಕಲ್ಲು ಎಳೆಯುತ್ತಿದೆ ಎಂದು ಬಾಯಿ ಬಡಿದುಕೊಂಡು ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದರು. ಜೊತೆಗೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕುಳಿತು ಸಚಿವ ಹಾಗೂ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇತ್ತ ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆವರಣದಲ್ಲಿರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ, ಅಪ್ಪಿಕೋ ಚಳುವಳಿ ನಡೆಸಿದರು. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರಾವರಿ ಪ್ರಾಧಿಕಾರ ಆದೇಶದಂತೆ, ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಅಂದಿನಿಂದ ಮಂಡ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ರೈತರ ಪ್ರತಿಭಟನೆಗಳು ಮುಂದುವರಿದಿವೆ.