ಹೊಸದಿಗಂತ ವರದಿ ಮಂಡ್ಯ :
ಕೃಷ್ಣರಾಜಸಾಗರ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ‌್ಯಕರ್ತರು ನಗರದಲ್ಲಿ ಚಡ್ಡಿ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಜಮಾಯಿಸಿದ ಕಾರ‌್ಯಕರ್ತರು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ರಾಸುಗಳ ಜೊತೆ ಚಡ್ಡಿ ಮೆರವಣಿಗೆ ಹೊರಟು, ಜೆ.ಸಿ. ವೃತ್ತ, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದರು.
ಯಾವುದೇ ಆದೇಶ ಇಲ್ಲದಿದ್ದರೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಿ ಕಾಂಗ್ರೆಸ್ ಸರ್ಕಾರ ದುಡುಕಿನ ನಿರ್ಧಾರ ಕೈಗೊಂಡಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಧೋರಣೆಯಿಂದ ಜಲಾಶಯಗಳಲ್ಲಿ ನೀರು ಬರಿದಾಗುತ್ತಿದೆ ಎಂದು ಆರೋಪಿಸಿದರು.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಸುಪ್ರೀಂ ಕೋರ್ಟ್‌ನಲ್ಲಿ ವಾಸ್ತವ ಸ್ಥಿತಿ ವಿಚಾರ ಮುಂದಿಟ್ಟು ವಾದ ಮಂಡನೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಖುದ್ದು ಹಾಜರಾಗದೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಾಹಿತಿ ನೀಡಿರುವುದು ಸರ್ಕಾರದ ವೈಫಲ್ಯತೆಯನ್ನು ಎತ್ತಿ ತೋರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.