ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲಿಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾರ್ಮಿಕವಾಗಿ ಸಂದೇಶ ಪ್ರಕಟಿಸಿದ್ದಾರೆ.
ಇದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಬುಧವಾರವಷ್ಟೇ ಡಿಕೆ ಶಿವಕುಮಾರ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ‘ಪ್ಲೀಸ್ ವೈಟ್’ ಎಂಬ ಸಂದೇಶ ಕಳುಹಿಸಿದ್ದರು.
ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ನಂತರದಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹಲವು ಕ್ಷಿಪ್ರ ಬೆಳವಣಿಗೆಗಳು ನಡೆದಿದ್ದವು. ಅದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಸಂದೇಶ ಪ್ರಕಟಿಸಿದ್ದಾರೆ.
ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಕೆ ಶಿವಕುಮಾರ್ ಬರೆದುಕೊಂಡಿದ್ದಾರೆ. ವರ್ಡ್ ಪವರ್ ಈಸ್ ವರ್ಲ್ಡ್ ಪವರ್. ಅದು ನ್ಯಾಯಾಧೀಶರಾಗಿರಲಿ, ಅಧ್ಯಕ್ಷರಾಗಿರಲಿ ಅಥವಾ ನಾನೂ ಸೇರಿದಂತೆ ಯಾರೇ ಆಗಿರಲಿ, ಆಡಿದ ಮಾತಿನಂತೆ ನಡೆದುಕೊಳ್ಳಬೇಕು ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಏತನ್ಮಧ್ಯೆ, ರಾಹುಲ್ ಗಾಂಧಿ ಜತೆ ಡಿಕೆ ಶಿವಕುಮಾರ್ ಸಹ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆ ಮಾತುಕತೆ ಗುಟ್ಟನ್ನು ಬಿಟ್ಟುಕೊಡ ಡಿಕೆ ಶಿವಕುಮಾರ್, ‘ರಾಹುಲ್ ಗಾಂಧಿಯವರು ನನ್ನೊಂದಿಗೆ ಏನು ಸಂವಹನ ಮಾಡಿದ್ದಾರೆ ಎಂಬುದು ಮಾಧ್ಯಮದಲ್ಲಿ ಮಾತನಾಡುವ ವಿಚಾರವಲ್ಲ, ಹೇಳುವ ಅವಶ್ಯಕತೆಯೂ ಇಲ್ಲ’ ಎಂದಿದ್ದಾರೆ. ಆದರೆ, ತಮ್ಮ ಗುರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28 ಸೀಟು ಪಡೆಯುವುದು ಮತ್ತು ದೇಶದಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿ ಮಾಡುವುದಾಗಿದೆ ಎಂದು ಹೇಳಿದ್ದಾರೆ.
ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ! ಏನಿದು ಡಿಸಿಎಂ ಟ್ವೀಟ್?

