ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸರ್ಕಾರಿ ಅಧಿಕಾರಿಯನ್ನು ಅಮಾನತುಗೊಳಿಸಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಆದೇಶ ಹೊರಡಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರಿ ಅಧಿಕಾರಿಯೊಬ್ಬರು ತನ್ನ ಮೃತ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ತಿಂಗಳಿನಿಂದ ಅತ್ಯಾಚಾರವೆಸಗಿದ್ದಾರೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದು, ಬಳಿಕ ಬಾಲಕಿಗೆ ಗರ್ಭಪಾತ ಮಾಡಿಸಲಾಗಿದೆ ಎಂಬ ಆರೋಪದ ಮೇಲೆ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಸಿಎಂ ಅಧಿಕಾರಿಯನ್ನು ಅಮಾನತುಗೊಳಿಸುವುದಾಗಿ ಹೇಳಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಸರ್ಕಾರಿ ಅಧಿಕಾರಿಯು 2020 ಮತ್ತು 2021 ರ ನಡುವೆ ಹಲವು ತಿಂಗಳುಗಳ ಕಾಲ ಅಪ್ರಾಪ್ತ ಸಂತ್ರಸ್ತೆಗೆ ಲೈಂಗಿಕ ಕಿರುಕುಳ, ದೈಹಿಕ ಕಿರುಕುಳ ನೀಡುವುದರ ಜೊತೆಗೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿಸಿದ್ದಾರೆ.
ಅಪ್ರಾಪ್ತೆಯ ವೈದ್ಯಕೀಯ-ಕಾನೂನು ಪರೀಕ್ಷೆಯನ್ನು ನಡೆಸಲಾಗಿದ್ದು, ಈ ಪ್ರಕರಣದ ಕುರಿತ ತನಿಖೆ ಮುಂದುವರೆದಿದೆ.