ಹೊಸ ದಿಗಂತ ವರದಿ, ಹುಬ್ಬಳ್ಳಿ:
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಬಗ್ಗೆ ಹೇಳಿಕೆ ನೀಡದಂತೆ ನನ್ನ ಸೇರಿ ಪಕ್ಷದ ಎಲ್ಲರಿಗೂ ಸುಮ್ಮನಿರಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು(ಮಾಧ್ಯಮದರವು) ಹೇಳುವುದಕ್ಕೆ ನಾನು ಉತ್ತರ ನೀಡಲ್ಲ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ವರಿಷ್ಠರ ಮಾರ್ಗದರ್ಶನದಲ್ಲಿ ನಾವು ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುವುದು ಮಾತಿಗಷ್ಟೇ. ಆ ರೀತಿ ಏನು ಆಗಿಲ್ಲ. ಇದು ಆಂತರಿಕ ವಿಷಯವಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಮಹದಾಯಿ ಯೋಜನೆ ಅನುಷ್ಠಾನ ಕುರಿತು ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿ ಪ್ರಧಾನಿ ಮೋದಿ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವು. ಈ ಬಗ್ಗೆ ಸಚಿವ ಸಂಪುಟದಲ್ಲಿ ಏನು ಚರ್ಚೆ ನಡೆಯಲಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.