ಹೊಸದಿಗಂತ ಡಿಜಿಟಲ್ ಡೆಸ್ಕ್;
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಆತನ ವಿರುದ್ಧ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ವಿನೀತ್ ಕುಮಾರ್ ಗೋಯಲ್, ಗುರುವಾರ (ಆಗಸ್ಟ್ 08) ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಮಹಿಳೆಯು ಅಧ್ಯಯನ ನಡೆಸುತ್ತಿದ್ದರು. ಇದೇ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಲಾಗಿದ್ದು, ಶುಕ್ರವಾರ (ಆಗಸ್ಟ್ 09) ವೈದ್ಯೆಯ ಶವ ಪತ್ತೆಯಾಗಿದೆ.ಇದುವರೆಗೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಪ್ರಕರಣವು ದೇಶಾದ್ಯಂತ ಭಾರೀ ಸುದ್ದಿಯಾಗಿದ್ದು, ಪ್ರತಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಸಾರ್ವಜನಿಕರೂ, ವೈದ್ಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ವೈದ್ಯಕೀಯ ಸೇವೆಗಳನ್ನು ಮುಂದುವರೆಸುವುದಿಲ್ಲ ಎಂದು ಪ್ರತಿಭಟನಾ ನಿರತ ವೈದ್ಯರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಚ್ಚಿಡಲು ಸರ್ಕಾರದ ಬಳಿ ಏನು ಇಲ್ಲ. ಬಂಧಿತ ವ್ಯಕ್ತಿಯನ್ನು ತ್ವರಿತ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ತಪ್ಪಿತಸ್ಥರು ಯಾರೇ ಆದರೂ ಅವರಿಗೆ ಗಲ್ಲಿಗೆ ಹಾಕುವಂತೆ ನಾವು ಮನವಿ ಮಾಡುತ್ತೇವೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹಾಗೂ ವೈದ್ಯರು ಸಿಬಿಐ ಅಥವಾ ಬೇರೊಂದು ಏಜೆನ್ಸಿಯಿಂದ ತನಿಖೆ ನಡೆಸಬೇಕೆಂದು ಬಯಸಿದರೆ ಯಾವುದೇ ಅಭ್ಯಂತರವಿಲ್ಲದೆ ನಾವು ಪ್ರಕರಣವನ್ನು ವಹಿಸುತ್ತೇವೆ. ನ್ಯಾಯಸಮ್ಮತವಾದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರವಸೆ ನೀಡಿದ್ದಾರೆ.