ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆಲ್ಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆದ ಪಂದ್ಯದಲ್ಲಿ ವಿಜಯಲಕ್ಷ್ಮಿ ಹೈದರಾಬಾದ್ ತಂಡಕ್ಕೆ ಒಲಿದಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ ಹೈದರಾಬಾದ್ 20 ಓವರ್‌ಗಳಲ್ಲಿ ಬರೋಬ್ಬರಿ 278 ರನ್ ಕಲೆಹಾಕಿತು. 279 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ 18.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 168 ರನ್ಗಳಿಗೆ ಆಲೌಟ್ ಅಗುವ ಮೂಲಕ ಟೂರ್ನಿಯಲ್ಲಿ 8ನೇ ಸ್ಥಾನಕ್ಕೆ ಕುಸಿದು ತನ್ನ ಅಭಿಯಾನ ಅಂತ್ಯಗೊಳಿಸಿತು.
ಹೈದರಾಬಾದ್ ತಂಡಕ್ಕೆ ಆರಂಭಿಕ ಜೋಡಿ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ವೇಗದ ಆರಂಭ ನೀಡಿದರು. ಇಬ್ಬರೂ ಆಟಗಾರರು ಮೊದಲ ವಿಕೆಟ್‌ಗೆ 6.5 ಓವರ್‌ಗಳಲ್ಲಿ 92 ರನ್ ಸೇರಿಸಿದರು. ಅಭಿಷೇಕ್ ಶರ್ಮಾ 16 ಎಸೆತಗಳಲ್ಲಿ 32 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರು. ಇದಾದ ನಂತರ ಬಂದ ಹೆನ್ರಿಕ್ ಕ್ಲಾಸೆನ್ ಕೂಡ ಕೇವಲ 39 ಎಸೆತಗಳಲ್ಲಿ 105 ರನ್ಗಳ ಅಜೇಯ ಇನ್ನಿಂಗ್ಸ್ ಆಡಿದರು.
279ರನ್ಗಳ ಬೃಹತ್ ಚೇಸ್ ಆರಂಭಿಸಿದ ಕೆಕೆಆರ್ಗೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಸುನಿಲ್ ನರೈನ್ 16 ಎಸೆತಗಳಲ್ಲಿ ತಲಾ 3 ಬೌಂಡರಿ, 3 ಸಿಕ್ಸರ್ಗಳ ಸಹಿತ 31 ರನ್ಗಳಿಸಿ ಉನಾದ್ಕಟ್ ಬೌಲಿಂಗ್ನಲ್ಲಿ ಬೌಲ್ಡ್ ಆದರು. ಉಳಿದ ಬ್ಯಾಟರ್ಗಳು ನಿರೀಕ್ಷಿತ ಪ್ರದರ್ಶನ ತೋರಲಿಲ್ಲ.