ಹೊಸದಿಗಂತ ಬೆಳಗಾವಿ:
ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಚಾಕು ಇರಿತದ ಪ್ರಕರಣಗಳು ವರದಿಯಾಗುತ್ತಿದ್ದು, ಕುಂದಾನಗರಿಯ ಜನತೆ ಭೀತಿಯಲ್ಲಿ ದಿನ ಕಳೆಯುವಂತಾಗಿದೆ. ಹಾಡಹಗಲೇ ನಗರದ ನ್ಯೂ ಗಾಂಧಿನಗರದ ಮಸೀದಿ ಬಳಿ 18 ವರ್ಷದ ಯುವಕ ಜುಶಾನ್ ಚಾವುಸ್ ಎಂಬಾತನ ಮೇಲೆ ದುಷ್ಕರ್ಮಿಯೊಬ್ಬ ಚಾಕು ಇರಿದು ಪರಾರಿಯಾಗಿದ್ದಾನೆ.
ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮುಜಾಮ್ಮಿಲ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ. ಗಂಭೀರವಾಗಿ ಗಾಯಗೊಂಡಿರುವ ಜುಶಾನ್‌ನನ್ನು ತಕ್ಷಣವೇ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಕೂಡಲೇ ಸ್ಥಳದಿಂದ ಕಾಲ್ಕಿತ್ತಿದ್ದ ಆರೋಪಿ ಮುಜಾಮ್ಮಿಲ್‌ನನ್ನು ಪೊಲೀಸರು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಲವೇ ದಿನಗಳ ಹಿಂದಷ್ಟೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರ ಕಾರು ಚಾಲಕ ಬಸವಂತ್ ಕಡೋಲ್ಕರ್ ಮೇಲೆ ಚಾಕು ಇರಿತ ನಡೆದಿತ್ತು. ಆ ಘಟನೆಯ ನೆನಪು ಹಸಿರಿರುವಾಗಲೇ ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿರುವುದು ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಲನ ಮೂಡಿಸಿದೆ. ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

