ಕೊಡಗು: 411 ಜನರಲ್ಲಿ ಕ್ಷಯರೋಗ ಪತ್ತೆ

ಹೊಸದಿಗಂತ ವರದಿ, ಮಡಿಕೇರಿ
ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 411 ಕ್ಷಯ ರೋಗ ಸೋಂಕಿತರು ಕಂಡು ಬಂದಿದ್ದು, ಶೇ.8 ರಷ್ಟು ಮರಣ ಪ್ರಮಾಣ ಕಂಡುಬಂದಿದೆ. ಜನರು ಕ್ಷಯರೋಗದ ಬಗ್ಗೆ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ವತಿಯಿಂದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕ್ಷಯರೋಗ ನಿರ್ಮೂಲನೆ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಲಾಗಿದ್ದ ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷಯ ರೋಗಕ್ಕೆ ಬೇಕಾದ ಚಿಕಿತ್ಸೆ ಮತ್ತು ಔಷಧ ನೀಡಿ ಅದನ್ನು ನಿರ್ಮೂಲನೆ ಮಾಡಬಹುದು ಎಂದು ಅವರು ಹೇಳಿದರು.
ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಆನಂದ್ ಅವರು ಮಾತನಾಡಿ, ಕೆಮ್ಮುವಾಗ ರಕ್ತ ಸ್ರಾವವಾಗುವುದು, ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಜ್ವರ, ತೂಕ ಕಡಿಮೆಯಾಗುವಿಕೆ ಮತ್ತು ರಾತ್ರಿ ವೇಳೆ ಬೆವರುವುದು ಕ್ಷಯ ರೋಗದ ಲಕ್ಷಣವಾಗಿದೆ ಎಂದರು.
ಕ್ಷಯರೋಗ ಲಕ್ಷಣವಿದ್ದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಕಫ ಹಾಗೂ ಕ್ಷ-ಕಿರಣ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ಷಯರೋಗವೆಂದು ದೃಢಪಟ್ಟಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಡಾಟ್ಸ್ ಮುಖಾಂತರ ಉಚಿತವಾಗಿ ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆ ಮಾಡಲಾಗುವುದು ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷೆ ಸವಿತಾ ರೈ ಅವರು ಮುಂದಿನ ದಿನಗಳಲ್ಲಿ ಇನ್ನೂ ಉತ್ತಮವಾಗಿ ಕಾರ್ಯಾಗಾರ ಆಯೋಜಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಆರ್’ಸಿಎಚ್.ಅಧಿಕಾರಿ ಡಾ.ಗೋಪಿನಾಥ್ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!