ಕೊಡಗು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಹೊಸದಿಗಂತ ವರದಿ, ಮಡಿಕೇರಿ
ಸಮಾಜದಲ್ಲಿ ಪತ್ರಕರ್ತರ ಪಾತ್ರ ಮತ್ತು ಜವಾಬ್ದಾರಿ ಮಹತ್ವದ್ದಾಗಿದ್ದು, ಸಂವಿಧಾನದ ನಾಲ್ಕನೇ ಅಂಗವಾಗಿ ಪತ್ರಿಕಾ ರಂಗವನ್ನು ಗುರುತಿಸಲಾಗಿದೆ. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಲೋಪಗಳನ್ನು ಹುಡುಕಿ ಜನರಿಗೆ ಮನವರಿಕೆ ಮಾಡುವ ಕೆಲಸ ಪತ್ರಕರ್ತರಿಂದ ಆಗಬೇಕು ಎಂದು ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಸಲಹೆ ಮಾಡಿದರು.
ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕೊಡಗು ಪತ್ರಕರ್ತರ ಸಂಘದ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗ ಶಾಶ್ವತವಾಗಿರಬೇಕೆಂದು ಅಭಿಪ್ರಾಯಪಟ್ಟರಲ್ಲದೆ, ಪತ್ರಕರ್ತರ ಬೇಡಿಕೆಗಳಿಗೆ ಸರಕಾರದ ಮಟ್ಟದಲ್ಲಿ ಸ್ಪಂದಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಸಮಾಜದ ತಪ್ಪುಗಳನ್ನು ತಿದ್ದುವ ಮೂಲಕ ಅಭಿವೃದ್ಧಿಗೆ ಪೂರಕವಾಗುವ ರೀತಿಯಲ್ಲಿ ಪತ್ರಕರ್ತರು ಕಾರ್ಯ ನಿರ್ವಹಿಸಬೇಕೇ ಹೊರತು ವ್ಯಕ್ತಿಯ ಚಾರಿತ್ರ್ಯವಧೆ ಮಾಡಬಾರದು ಎಂದು ಪತ್ರಕರ್ತರ ಸಂಘವನ್ನು ಉದ್ಘಾಟಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕಿವಿಮಾತು ಹೇಳಿದರು.
ಕರ್ನಾಟಕ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಹಿರಿಯ ಪತ್ರಕರ್ತರಾದ ಟಿ.ಪಿ.ರಮೇಶ್ ಮಾತನಾಡಿ, ಬಿ.ಜಿ.ಅನಂತಶಯನ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರುಳೀಧರ್ ಮಾತನಾಡಿದರು.
ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ರಮೇಶ್ ಹೊಳ್ಳ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್’ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎಸ್.ಮನುಶೆಣೈ ಪತ್ರಕರ್ತರಿಗೆ ಶುಭ ಹಾರೈಸಿದರು.
ಹಿರಿಯ ಪತ್ರಕರ್ತ ಬಿ.ಜಿ.ಅನಂತಶಯನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕ್ಷೇಮ ನಿಧಿಗೆ ಆರ್ಥಿಕ ನೆರವು:
ಇದೇ ಸಂದರ್ಭ ಪತ್ರಕರ್ತರ ಕ್ಷೇಮ ನಿಧಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ 25 ಸಾವಿರ, ಶಾಸಕ ಕೆ.ಜಿ.ಬೋಪಯ್ಯ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ ತಲಾ 10 ಸಾವಿರ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ 5 ಸಾವಿರ ರೂ.ಗಳ ದೇಣಿಗೆ ನೀಡುವುದಾಗಿ ಘೋಷಿಸಿದರೆ, ಹಿರಿಯ ಪತ್ರಕರ್ತ ಬಿ.ಜಿ.ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷ್ಮೀ ಅವರ ಹೆಸರಿನಲ್ಲಿ ರೂ.25 ಸಾವಿರ ದತ್ತಿನಿಧಿ ನೀಡಿದರು.
ಹಿರಿಯ ಪತ್ರಕರ್ತರಾದ ಬಿ.ಜಿ.ಅನಂತಶಯನ ಹಾಗೂ ಅನಿಲ್ ಹೆಚ್.ಟಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮೊದಲು ಸರ್ವ ಸದಸ್ಯರ ಸಭೆ ನಡೆಯಿತು. ಹಿರಿಯ ಪತ್ರಕರ್ತರಾದ ಎಸ್.ಎಂ.ಶ್ರೀನಿವಾಸ್ ಚಂಗಪ್ಪ ಹಾಗೂ ಸಾಹಿತಿ ಡಿ.ಎಸ್.ನಾಗಭೂಷಣ್ ಅವರಿಗೆ ಸಭೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!