Sunday, December 4, 2022

Latest Posts

ಕೊಡಗು ವಿವಿಯಿಂದ ಸುತ್ತಮುತ್ತಲ ಜಿಲ್ಲೆಯ ವಿದ್ಯಾರ್ಥಿಗಳಿಗೂ ಅನುಕೂಲ: ಡಾ. ಜಗತ್ ತಿಮ್ಮಯ್ಯ

ಹೊಸದಿಗಂತ ವರದಿ ಕುಶಾಲನಗರ:

ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರವು ನೂತನ ಕೊಡಗು ವಿಶ್ವವಿದ್ಯಾನಿಲಯವಾಗಿ ಅಧಿಕೃತವಾಗಿ ಘೋಷಣೆಯಾಗಿರುವುದು ಸಂತಸ ತಂದಿದೆ. ಇದರಿಂದ ಕೇವಲ ಕೊಡಗು ಜಿಲ್ಲೆಗಷ್ಟೇ ಅಲ್ಲದೆ, ಸುತ್ತಮುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳೂ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೆ ಉತ್ತಮ ಅವಕಾಶ ಸಿಕ್ಕಿದೆ ಎಂದು ಮಡಿಕೇರಿ ಎಫ್.ಎಂ.ಕೆ.ಎ.ಸಿ. ಕಾಲೇಜಿನ ಪ್ರಾಂಶುಪಾಲ ಡಾ. ಸಿ. ಜಗತ್ ತಿಮ್ಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ವಿಜ್ಞಾನ ಸಂಕೀರ್ಣದ ಒಳಾಂಗಣದಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಅಂಗವಾಗಿ ಹಮ್ಮಿಕೊಂಡಿದ್ದ ‘ಕ್ಯಾಂಪಸ್ ನೋಡ ಬನ್ನಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊಡಗಿನ ಯುವ ಜನಾಂಗ ದೂರ ಪ್ರದೇಶಗಳಿಗೆ ಹೋಗಿ ಉನ್ನತ ವ್ಯಾಸಂಗ ಮಾಡಬೇಕಾಗಿದ್ದ ಪರಿಸ್ಥಿತಿ ಈಗ ಇಲ್ಲ. ಬಹಳ ಹತ್ತಿರದಲ್ಲೇ ಉನ್ನತ ಶಿಕ್ಷಣ ಪಡೆದುಕೊಳ್ಳುವುದಕ್ಕೆ ಅವಕಾಶವಿದೆ. ರಾಜ್ಯ ಸರ್ಕಾರವು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೊಡಗಿನಲ್ಲಿ ಸಾಂಪ್ರದಾಯಿಕ ವಿಶ್ವವಿದ್ಯಾನಿಲಯಗಳಿಗಿಂತ ವಿಭಿನ್ನ ಮಾದರಿಯ ವಿಶ್ವವಿದ್ಯಾನಿಲಯವನ್ನು ಪ್ರಾರಂಭಿಸಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಉನ್ನತ ಶಿಕ್ಷಣ ಎಲ್ಲೆಡೆ ದೊರಕುವಂತಾಗಬೇಕು. ಶಿಕ್ಷಣವು ಸಾಮಾಜಿಕ ಸಂಸ್ಥೆಯಾಗಿದೆ. ಅದರ ಮೂಲಕ ಸಮಾಜವು ತನ್ನ ಸದಸ್ಯರಿಗೆ ಜ್ಞಾನ, ಸಂಗತಿಗಳು, ಉದ್ಯೋಗ ಕೌಶಲ್ಯ ಮತ್ತು ಮೌಲ್ಯಗಳನ್ನು ಒದಗಿಸುತ್ತದೆ. ಶಿಕ್ಷಣದ ಪ್ರಮುಖ ಪಾತ್ರವೆಂದರೆ ಅದು ವೈಯಕ್ತಿಕ ಜೀವನವನ್ನು ಸುಧಾರಿಸುತ್ತದೆ ಮತ್ತು ಸಮಾಜವು ಸುಗಮವಾಗಿ ನಡೆಯಲು ಸಹಾಯ ಮಾಡುತ್ತದೆ. ಈ ಶೈಕ್ಷಣಿಕ ಸಾಲಿನಲ್ಲಿ ಕೊಡವ ಪೀಠ ಸ್ಥಾಪನೆಯಾಗಿರುವುದು ಕೂಡ ಕೊಡವ ಭಾಷೆ, ಸಂಸ್ಕೃತಿಗೂ ಹೆಚ್ಚು ಪ್ರೋತ್ಸಾಹ ದೊರೆತಂತಾಗಿದೆ. ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಈ ಸಂಸ್ಥೆಯು ಉನ್ನತ ಹಂತಕ್ಕೆ ಅಭಿವೃದ್ಧಿ ಹೊಂದಲಿ ಎಂದು ಆಶಿಸಿದರು.

ಶಿಕ್ಷಣ ಶಕ್ತಿಶಾಲಿ ಅಸ್ತ್ರ: ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಸಿ.ದಯಾನಂದ್ ಅವರು ಮಾತನಾಡಿ, ಶಿಕ್ಷಣವು ಪ್ರಪಂಚದ ಸಂಪೂರ್ಣ ದೃಷ್ಟಿಕೋನವನ್ನು ಬದಲಾಯಿಸಬಹುದಾದ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದೆ. ಶಿಕ್ಷಣದಿಂದ ವ್ಯಕ್ತಿ ಉತ್ತಮ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬಹುದು. ಇದು ಜೀವನದಲ್ಲಿ ಉತ್ತಮ ವ್ಯಕ್ತಿಯಾಗಲು ನಮಗೆ ಸಹಾಯ ಮಾಡುತ್ತದೆ. ಶಿಕ್ಷಣವು ನಮ್ಮ ಮನಸ್ಥಿತಿಯನ್ನು ಸಕಾರಾತ್ಮಕ ದಿಕ್ಕಿನಲ್ಲಿ ರೂಪಿಸಲು ಸಹಾಯ ಮಾಡುತ್ತದೆ ಮತ್ತು ಈ ಮನಸ್ಥಿತಿಯೊಂದಿಗೆ ಜನರು ತಮ್ಮ ಜೀವನವನ್ನು ಉತ್ತಮಗೊಳಿಸಬಹುದು. ಶಿಕ್ಷಣದೊಂದಿಗೆ ಪದವಿ ಬರುತ್ತದೆ ಮತ್ತು ಪದವಿಯೊಂದಿಗೆ ಸಾಕಷ್ಟು ಅವಕಾಶಗಳು ಬರುತ್ತವೆ ಎಂದು ತಿಳಿಸಿದರು.

ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಪ್ರಭಾರ ನಿರ್ದೇಶಕ ಡಾ. ಕೆ.ಕೆ. ಧರ್ಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರವು ಕಳೆದ 9 ವರ್ಷಗಳಿಂದ ಕೊಡಗು, ದಕ್ಷಿಣ ಕನ್ನಡ, ಮೈಸೂರು, ಹಾಸನ ಹಾಗೂ ರಾಜ್ಯದ ಇನ್ನಿತರೆ ಜಿಲ್ಲೆಗಳ ವಿದ್ಯಾರ್ಥಿಗಳು ಹಾಗೂ ನೆರೆ ರಾಜ್ಯಗಳ ವಿದ್ಯಾರ್ಥಿಗಳಿಗೂ ಉನ್ನತ ಶಿಕ್ಷಣದ ಸೌಲಭ್ಯವನ್ನು ಯಶಸ್ವಿಯಾಗಿ ನೀಡುತ್ತಾ ಬಂದಿದೆ. ಇದುವರೆಗೆ ಸಾವಿರಾರು ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಅಂತರರಾಷ್ಟ್ರೀಯ ವಿದ್ಯಾರ್ಥಿಗಳನ್ನೂ ಒಳಗೊಂಡಂತೆ ನಾನಾ ಜಿಲ್ಲೆ ಮತ್ತು ರಾಜ್ಯಗಳ ವಿದ್ಯಾರ್ಥಿಗಳು ಪಿಎಚ್’ಡಿ ಪದವಿಗಳನ್ನು ಪಡೆದುಕೊಂಡಿದ್ದಾರೆ. ಶೈಕ್ಷಣಿಕ ಸೌಲಭ್ಯಗಳಷ್ಟೇ ಅಲ್ಲದೇ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ನಮ್ಮ ಸಂಸ್ಥೆ ಒಳಗೊಂಡಿದೆ ಎಂದು ತಿಳಿಸಿದರು.

ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರವೀಣ್ ಕುಮಾರ್, ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ, ಕುಶಾಲನಗರದ ಅನುಗ್ರಹ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಂಡರಿನಾಥ್ ನಾಯ್ಡು, ಎಂ.ಜಿ.ಎಂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಲಿಖಿತಾ ಟಿ. ಅಪ್ಪಾಜಿ, ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಫಾ. ಜೋಸೆಫ್ ವರ್ಗೀಸ್ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಸೂಕ್ಷ್ಮಾಣು ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎಸ್. ಗುಣಶ್ರೀ, ಯೋಗ ವಿಜ್ಞಾನ ವಿಭಾಗದ ಸಂಯೋಜಕ ಡಾ. ಶಾಮಸುಂದರ ಜೆ., ಕೊಡಗು ಜಿಲ್ಲೆಯ ವಿವಿಧ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳಾದ ರಾಜು ಎಚ್.ಎನ್., ರಂಗಸ್ವಾಮಿ ಎಲ್.ಸಿ., ಪ್ರತಾಪ್ ಡಿ.ಪಿ., ಉಪನ್ಯಾಸಕರಾದ ಹರೀಶ್, ಶಿವಕುಮಾರ್ ಮತ್ತು ಯೋಗೇಂದ್ರ ಅವರು ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ – ಪಂಗಡ ಘಟಕದ ಸಂಯೋಜಕ ರಾಜಕುಮಾರ ಎಸ್. ಮೇಟಿ, ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ವರ್ಗ, ತಾಂತ್ರಿಕ ವರ್ಗ, ಪೋಷಕರು, ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂವೇದಿತಾ ಪ್ರಾರ್ಥಿಸಿದರೆ, ಕನ್ನಡ ಉಪನ್ಯಾಸಕ ಜಮೀರ್ ಅಹಮದ್ ನಿರೂಪಿಸಿದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!