ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆದ ಬೆನ್ನಲ್ಲೇ, ಅಲ್ಲಿನ ನಿವಾಸಿಗಳಿಗೆ ಸರ್ಕಾರ ಘೋಷಿಸಿರುವ ಭರ್ಜರಿ ಪುನರ್ವಸತಿ ಪ್ಯಾಕೇಜ್ ಈಗ ತೀವ್ರ ಚರ್ಚೆಗೆ ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಕಿಡಿಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದ ನಡೆ “ತುಷ್ಟೀಕರಣ ರಾಜಕಾರಣದ ಪರಮಾವಧಿ” ಎಂದು ಬಣ್ಣಿಸಿದ್ದಾರೆ.
ರಾಜ್ಯದಲ್ಲಿ ಬರ ಮತ್ತು ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾಮಾನ್ಯ ಜನರು ವರ್ಷಗಳಿಂದ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಒಂದು ನಿರ್ದಿಷ್ಟ ಸಮುದಾಯಕ್ಕೆ ಕೇವಲ ಎರಡು ದಿನಗಳಲ್ಲಿ ಪರಿಹಾರ ಒದಗಿಸಿರುವುದು ಸರ್ಕಾರದ ಓಲೈಕೆ ನೀತಿಯನ್ನು ತೋರಿಸುತ್ತದೆ.
ಪಕ್ಕದ ರಾಜ್ಯದ ಕಾಂಗ್ರೆಸ್ ನಾಯಕರೊಬ್ಬರ ಕರೆಗೆ ಓಗೊಟ್ಟು, ಕಾನೂನಿನ ಚೌಕಟ್ಟನ್ನು ಮೀರಿ ಸರ್ಕಾರ ಕೆಲಸ ಮಾಡುತ್ತಿದೆ. ಇದು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. “ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಹಣಕ್ಕಾಗಿ ತಿಂಗಳುಗಟ್ಟಲೆ ಕಾಯಬಹುದು, ಆದರೆ ಅಕ್ರಮವಾಗಿ ಜಾಗ ಅತಿಕ್ರಮಿಸಿದವರಿಗೆ ಮಾತ್ರ ತಕ್ಷಣವೇ ಸೌಲಭ್ಯ ಸಿಗುತ್ತದೆ” ಎಂದು ಜೋಶಿ ವ್ಯಂಗ್ಯವಾಡಿದ್ದಾರೆ.

