ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದಿದ್ದ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಕೆಲವು ವಕೀಲರು ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಮಣಿಪುರದಂತಹ ಹಿಂಸಾಚಾರದ ಪ್ರಕರಣ ಸೇರಿದಂತೆ, ಕೆಲವು ಗಂಭೀರ ಪ್ರಕರಣಗಳನ್ನು ನಾವು ರಾಜ್ಯದಿಂದ ಹೊರಗೆ ವರ್ಗಾಯಿಸಿದ್ದೇವೆ. ಅಲ್ಲದೇ ವಿಚಾರಣಾ ನ್ಯಾಯಾಲಯ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಮತ್ತೊಂದು ತನಿಖೆಗೆ ಆದೇಶಿಸಲು ಅಧಿಕಾರ ಹೊಂದಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ 6ನೇ ವರದಿಯನ್ನು ಸಹ ಸುಪ್ರೀಂ ಕೋರ್ಟ್ ಪರಿಶೀಲಿಸಿತು. ಅಲ್ಲದೇ ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆಗೆ ರಾಷ್ಟ್ರೀಯ ಕಾರ್ಯಪಡೆ (NTF) ಸಿದ್ಧ ಪಡಿಸಿದ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿತು. ಎನ್‌ಟಿಎಫ್‌ನ ವರದಿಯನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಂಚಿಕೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಅಲ್ಲದೇ ನಾಲ್ಕು ವಾರಗಳ ನಂತರ ನವೀಕರಿಸಿದ ವರದಿಯನ್ನು ಸಲ್ಲಿಸುವಂತೆ ಕೋರ್ಟ್ ಸೂಚಿಸಿತು.
ಪಶ್ಚಿಮ ಬಂಗಾಳದ ವಿಚಾರಣಾ ನ್ಯಾಯಾಲಯವು ನವೆಂಬರ್ 11 ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ.