ರಾಜ್ಯದಲ್ಲಿ ಕೋವಿಡ್‌- ಡೆಂಗ್ಯೂ ಆತಂಕ: ಮುನ್ನೆಚ್ಚರಿಕೆ ವಹಿಸಲಾಗಿದೆ, ಯಾರಿಗೂ ಆತಂಕ ಬೇಡ ಎಂದ ಸಚಿವ ಡಾ.ಕೆ.ಸುಧಾಕರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ರಾಜ್ಯದಲ್ಲಿ ಕೋವಿಡ್‌ ಮತ್ತು ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬೆಂಗಳೂರಿನಲ್ಲಿಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚಿವೆ. ಆದರೆ ರೋಗದ ತೀವ್ರತೆ ಅಥವಾ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಇತರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರು ಬೂಸ್ಟರ್‌ ಡೋಸ್‌ ಪಡೆದುಕೊಳ್ಳಬೇಕು. ಮಕ್ಕಳು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು. ಜತೆಗೆ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸಬೇಕು, ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಆ ಮೂಲಕ ಸೋಂಕು ನಿಯಂತ್ರಣದಲ್ಲಿ ಇಡಲು ಸಾಧ್ಯವಿದೆ ಎಂದರು.

ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ. ಅದರ ಜತೆ ಡೆಂಗಿ ಪ್ರಕರಣಗಳ ಸಂಖ್ಯೆ ಕೂಡ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಮೆಡಿಕಲ್‌ ಕಾಲೇಜಿನಲ್ಲಿ ಜಿನೋಮಿಕ್‌ ಸಿಕ್ವೆನ್ಸಿಂಗ್‌ ಲ್ಯಾಬ್‌ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!