November 12, 2026
Thursday, November 12, 2026
spot_img

ಇನ್ಮುಂದೆ ಕೆಪಿಎಸ್‌ಸಿ ಪರೀಕ್ಷೆ ಚುನಾವಣೆ ಮಾದರಿಯಲ್ಲಿ: ಅಕ್ರಮ ತಡೆಗೆ ಸಿಎಂ ಡಿಕೆಶಿ ಮಾಸ್ಟರ್ ಪ್ಲ್ಯಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೆಪಿಎಸ್‌ಸಿ ಪರೀಕ್ಷೆಗಳಲ್ಲಿನ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಕಟ್ಟುನಿಟ್ಟಿನ ಸುಧಾರಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ನಡೆಯಲಿರುವ ಪೂರ್ವಭಾವಿ ಪರೀಕ್ಷೆಯನ್ನು ಚುನಾವಣೆ ಮಾದರಿಯಲ್ಲಿ ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಪರೀಕ್ಷೆಯ ಸಿದ್ಧತೆಗಳನ್ನು ಪರಿಶೀಲಿಸಿದ ಅವರು, ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ. ಪರೀಕ್ಷಾ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಬೇಕು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಸಲಹೆ ನೀಡಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ

ಪರೀಕ್ಷಾ ಕೊಠಡಿಗಳಲ್ಲಿ ಮೊದಲ ಬಾರಿಗೆ ಇಬ್ಬರು ಮೇಲ್ವಿಚಾರಕರನ್ನು ನೇಮಿಸುವ ಕ್ರಮಕ್ಕೆ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಕೆಪಿಎಸ್‌ಸಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.

ಇದನ್ನೂ ಓದಿ:

ಪೊಲೀಸ್ ನೇಮಕಾತಿ ಪರೀಕ್ಷೆಗಳಲ್ಲಿ ಅನುಸರಿಸುವ ಮಾದರಿಯಲ್ಲೇ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಎಚ್ಚರಿಕೆ ವಹಿಸಿ, ಅಭ್ಯರ್ಥಿಗಳಿಗೆ ನ್ಯಾಯಯುತ ವಾತಾವರಣ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಮಕ್ಕಳಿಗೆ ಹೊಸ ವಿನ್ಯಾಸದ ಯೂನಿಫಾರ್ಮ್

ಸರ್ಕಾರಿ ಶಾಲಾ ಮಕ್ಕಳಿಗೂ ಖಾಸಗಿ ಶಾಲೆಗಳ ಮಕ್ಕಳಂತೆ ಆಕರ್ಷಕ ಸಮವಸ್ತ್ರ ನೀಡುವ ಉದ್ದೇಶದಿಂದ ಹೊಸ ವಿನ್ಯಾಸದ ಯೂನಿಫಾರ್ಮ್ ಪರಿಚಯಿಸಲು ಶಿಕ್ಷಣ ಇಲಾಖೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದ ಅವರು, 2001ರಿಂದ 2025ರವರೆಗೆ ಬಾಕಿ ಉಳಿದಿರುವ 1,574 ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಎಸ್‌ಸಿ, ಎಸ್‌ಟಿ ಸಮುದಾಯಗಳ ಸಮಾವೇಶ ಆಯೋಜನೆ ಹಾಗೂ ವಿವಿಧ ಸಮುದಾಯಗಳ ಶಾಸಕರೊಂದಿಗೆ ಸಭೆ ನಡೆಸುವ ಯೋಜನೆಯನ್ನೂ ಹಂಚಿಕೊಂಡಿದ್ದಾರೆ.

Must Read

Skip to toolbar