July 13, 2026
Monday, July 13, 2026
spot_img

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಗೊಳಿಸಿ ರಾಜ್ಯಪಾಲರಿಂದ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಕ್ರಮ ಕೈಗೊಂಡಿದ್ದು, ಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಸೋಮವಾರ ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ.

ಅಲ್ಲದೆ, ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ. ಇದರ ಜೊತೆಗೆ, ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶ ಹೊರಬೀಳುವವರೆಗೆ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿರುವ ಆರೋಪಗಳು ಕೇಳಿಬಂದಿವೆ. ವಿಶೇಷವಾಗಿ ತಮ್ಮ ಪುತ್ರಿ ಸುಮಾ ಎಸ್. ಸಾಹುಕಾರ್ ಅವರಿಗೆ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ಪಡೆಯಲು ಅನುಕೂಲವಾಗುವಂತೆ ಸುಳ್ಳು ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಬಳಸಿಕೊಂಡು ಮೀಸಲಾತಿಯ ಲಾಭ ಪಡೆಯಲು ಅವಕಾಶ ಮಾಡಿಕೊಟ್ಟಿರುವ ಆರೋಪವೂ ಉಲ್ಲೇಖಿಸಲಾಗಿದೆ.

ಈ ಆರೋಪಗಳು ಗಂಭೀರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಅವುಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ. ಸಂವಿಧಾನದ 317(1) ನೇ ವಿಧಿಯ ಅನ್ವಯ ಪ್ರಕರಣವನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸಲು ಶಿಫಾರಸು ಮಾಡಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ’ ಎಂದು ರಾಜ್ಯಪಾಲರ ಆದೇಶದ ಕುರಿತು ಲೋಕಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !