October 6, 2026
Tuesday, October 6, 2026
spot_img

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಮಂಗಳವಾರ KPSCಯ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಆಯೋಗದ ಸದಸ್ಯೆ ಬಿ.ವಿ. ಗೀತಾ ಅವರನ್ನು ಬಂಧಿಸಿದೆ. ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಈ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಇ.ಡಿ. ಕೈಗೊಂಡಿರುವ ಈ ಕ್ರಮ ಮತ್ತಷ್ಟು ಕುತೂಹಲ ಮೂಡಿಸಿದೆ.

ಶಿವಶಂಕರಪ್ಪ ನಿವಾಸದ ಮೇಲೆ ಇ.ಡಿ. ಮತ್ತೊಮ್ಮೆ ದಾಳಿ

ಶಿವಶಂಕರಪ್ಪ ಸಾಹುಕಾರ್ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳು ಮಂಗಳವಾರ ಮತ್ತೊಮ್ಮೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಮನೆಯಲ್ಲಿ ಹಾಜರಿದ್ದ ಶಿವಶಂಕರಪ್ಪ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KPSC ಸದಸ್ಯೆ ಬಿ.ವಿ. ಗೀತಾ ಅವರ ನಿವಾಸದಲ್ಲಿಯೂ ಇ.ಡಿ. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:

ಪ್ರಕರಣದ ತನಿಖೆಯಲ್ಲಿ ಶಿವಶಂಕರಪ್ಪ ಅವರ ಸಂಬಂಧಿ ಸುಗುರೇಶ ಜಕಾ ನೀಡಿದ ಹೇಳಿಕೆ ಹಾಗೂ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಅವರ ಹೇಳಿಕೆಗಳು ಪ್ರಮುಖವಾಗಿವೆ ಎಂದು ತಿಳಿದುಬಂದಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಕ್ಕೆ ನೆರವಾಗುವಂತೆ ಶಿವಶಂಕರಪ್ಪ ಸೂಚನೆ ನೀಡಿದ್ದರು ಎಂಬ ಆರೋಪದ ಬಗ್ಗೆಯೂ ತನಿಖೆ ಮುಂದುವರಿದಿದೆ.

ಏನಿದು ಅಕ್ರಮ?

ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬಳಿಕ 50ಕ್ಕೂ ಹೆಚ್ಚು ಅಭ್ಯರ್ಥಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಹುದ್ದೆ ಕೊಡಿಸುವುದಾಗಿ ಮಧ್ಯವರ್ತಿಗಳು 70 ಲಕ್ಷದಿಂದ 80 ಲಕ್ಷದವರೆಗೆ ಹಣ ಕೇಳಿದ್ದಾರೆ ಎನ್ನಲಾದ ಆಡಿಯೋ ದಾಖಲೆಗಳು ಬಹಿರಂಗವಾಗಿ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದಿತ್ತು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಇದೀಗ ಇ.ಡಿ. ತನಿಖೆಯೂ ವೇಗ ಪಡೆದುಕೊಂಡಿದ್ದು, ಹಣದ ವ್ಯವಹಾರ, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮ ಹಾಗೂ ಆರೋಪಿಗಳ ನಡುವಿನ ಸಂಪರ್ಕದ ಕುರಿತು ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ.

Must Read