October 13, 2026
Tuesday, October 13, 2026
spot_img

ಕೆಪಿಎಸ್‌ಸಿ ಹಗರಣ: SITಯ ಇಬ್ಬರು ಅಧಿಕಾರಿಗಳ ಬದಲಾವಣೆಗೆ ಸುಪ್ರೀಂ ಕೋರ್ಟ್ ಆದೇಶ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್ ರಚಿಸಿದ್ದ SITಯ ಇಬ್ಬರು ಹಿರಿಯ ಅಧಿಕಾರಿಗಳಾದ ಅಲೋಕ್ ಕುಮಾರ್ ಮತ್ತು ದಿವ್ಯಾ ಗೋಪಿನಾಥ್ ಅವರನ್ನು ತನಿಖಾ ತಂಡದಿಂದ ಹೊರಗಿಡಲು ಸಮ್ಮತಿಸಿರುವ ಸುಪ್ರೀಂ ಕೋರ್ಟ್, ಎರಡು ವಾರದೊಳಗೆ ಇವರ ಜಾಗಕ್ಕೆ ಪರ್ಯಾಯ ಅಧಿಕಾರಿಗಳ ಹೆಸರುಗಳನ್ನು ಹೈಕೋರ್ಟ್‌ಗೆ ಸೂಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು ಈ ಆದೇಶ ಹೊರಡಿಸಿದೆ.

ಸಿಐಡಿ ತನಿಖೆ ಶೇ.80 ರಷ್ಟು ಮುಕ್ತಾಯ

ಕೆಪಿಎಸ್‌ಸಿ ನೇಮಕಾತಿ ಅಕ್ರಮದ ತನಿಖೆಯನ್ನು ಹೈಕೋರ್ಟ್ ಈ ಹಿಂದೆ ಎಸ್‌ಐಟಿಗೆ ಒಪ್ಪಿಸಿ, ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ತಂಡ ರಚಿಸಿತ್ತು. ಆದರೆ, ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿ ನಡೆಸುತ್ತಿದ್ದು, ಶೇಕಡಾ 80 ರಷ್ಟು ತನಿಖಾ ಪ್ರಕ್ರಿಯೆ ಪೂರ್ಣಗೊಂಡಿದೆ. ಇಂತಹ ಹಂತದಲ್ಲಿ ಹೊಸದಾಗಿ ಎಸ್‌ಐಟಿ ರಚಿಸಿ ಮೊದಲಿನಿಂದ ಮರು ತನಿಖೆ ನಡೆಸುವುದರಿಂದ ಇಡೀ ತನಿಖೆಗೆ ಹಿನ್ನಡೆಯಾಗುತ್ತದೆ ಎಂದು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿತ್ತು.

ಹೈಕೋರ್ಟ್‌ಗೆ ಪರ್ಯಾಯ ಅಧಿಕಾರಿಗಳ ಆಯ್ಕೆ ಜವಾಬ್ದಾರಿ

ಇಂದು ಎರಡು ಕಡೆ ವಾದ ಆಲಿಸಿದ ಸುಪ್ರೀಂ ಕೋರ್ಟ್, ಇಬ್ಬರು ಅಧಿಕಾರಿಗಳನ್ನು ಬದಲಾಯಿಸಲು ಸೂಚಿಸಿದೆ. ಸರ್ಕಾರವು ಎರಡು ವಾರದೊಳಗೆ ಪರ್ಯಾಯ ಅಧಿಕಾರಿಗಳ ಹೆಸರುಗಳನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು. ತದನಂತರ ಹೈಕೋರ್ಟ್ ಉಭಯ ಕಡೆಯವರ ವಾದ-ಪ್ರತಿವಾದಗಳನ್ನು ಆಲಿಸಿ, ಸೂಕ್ತ ಅಧಿಕಾರಿಗಳನ್ನು ಆಯ್ಕೆ ಮಾಡಬೇಕು ಎಂದು ಹೇಳಿದೆ. ಅಲ್ಲಿಯವರೆಗೆ ಸಿಐಡಿ ಸಂಸ್ಥೆಯು ಯಾವುದೇ ಕಾರಣಕ್ಕೂ ನ್ಯಾಯಾಲಯಕ್ಕೆ ತನ್ನ ಅಂತಿಮ ತನಿಖಾ ವರದಿಯನ್ನು ಸಲ್ಲಿಸಬಾರದು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ.

ಇದನ್ನೂ ಓದಿ:

ಹೈಕೋರ್ಟ್‌ನಿಂದ ಬಸವರಾಜ್ ಕನ್ನಾಳೆಗೆ ಮಧ್ಯಂತರ ಜಾಮೀನು

ಇನ್ನೊಂದೆಡೆ, ಕೆಪಿಎಸ್‌ಸಿ ಭ್ರಷ್ಟಾಚಾರ ಹಗರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತಮಗೆ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠವು 5ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದಲ್ಲಿ ಕನ್ನಾಳೆ ಪರವಾಗಿ ಹಿರಿಯ ವಕೀಲ ಅರುಣ ಶ್ಯಾಮ್ ವಾದ ಮಂಡಿಸಿದರೆ, ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರು ಜಗದೀಶ್ ಅವರು ಜಾಮೀನು ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಅಂತಿಮವಾಗಿ ಕೋರ್ಟ್ ಆರೋಪಿಗೆ 5 ದಿನಗಳ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.

Must Read