ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಥುರಾದ ಕೃಷ್ಣ ಜನ್ಮಭೂಮಿ (Krishna Janmabhoomi ) ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ವಕೀಲ-ಕಮಿಷನರ್ (Advocate Commissioner) ಮೂಲಕ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು (ಜ.16) ತಡೆ ನೀಡಿದೆ.
ಶಾಹೀ ಈದ್ಗಾ ಮಸೀದಿ ಜಾಗದ ಸರ್ವೆ ನಡೆಸಲು ಆಯುಕ್ತರನ್ನು ನೇಮಿಸುವಂತೆ ಅಲಹಾಬಾದ್ ಹೈಕೋರ್ಟ್ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠವು, ಹೈಕೋರ್ಟ್‌ನಲ್ಲಿ ವಿಚಾರಣೆಯನ್ನು ಮುಂದುವರಿಸಬಹುದು. ಆದರೆ ಉನ್ನತ ನ್ಯಾಯಾಲಯದ ಮುಂದಿನ ವಿಚಾರಣೆಯ ದಿನಾಂಕದ ವರೆಗೆ ಆಯೋಗವನ್ನು ಕಾರ್ಯಗತಗೊಳಿಸಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಸ್ಥಳೀಯ ಆಯುಕ್ತರ ನೇಮಕವನ್ನು ಕೋರಿ ಸಲ್ಲಿಸಲಾದ ಅರ್ಜಿಯು “ಅಸ್ಪಷ್ಟವಾಗಿದೆ” ಎಂದು ಸುಪ್ರೀಂ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 23ರಂದು ವಿಚಾರಣೆಯನ್ನು ನಡೆಸಲಾಗುವುದು ಎಂದು ಹೇಳಿದೆ.