Saturday, November 8, 2025

ಸರ್ಕಾರಕ್ಕೆ ದಾಖಲೆಯ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರಿಸಿದ ಕೆಎಸ್‌ಡಿಎಲ್

ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಇಂದು ಸರ್ಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಮತ್ತು ಕೆಎಸ್‌ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಸಚಿವ ಪಾಟೀಲ್‌ ಮಾತನಾಡಿ, ಕೆಎಸ್‌ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭ ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರ್ಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

2022-23ರಲ್ಲಿ ಬಿಜೆಪಿ ಸರ್ಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರ್ಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಅವರು ನುಡಿದಿದ್ದಾರೆ.

error: Content is protected !!