ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ಬೆಂಕಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೇರಿದ್ದು, ಬೆಂಗಳೂರಿನ ಪ್ರಯಾಣಿಕರನ್ನು ಪತ್ತೆ ಹಚ್ಚಲು ರಾಜ್ಯದ ಅಧಿಕಾರಿಗಳ ತಂಡ ಕರ್ನೂಲ್‌ಗೆ ತೆರಳಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ 21 ಪ್ರಯಾಣಿಕರು ತುರ್ತು ಬಾಗಿಲಿನ ಮೂಲಕ ಪ್ರಾಣಾಪಾಯದಿಂದ ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಇಬ್ಬರು ಚಾಲಕರು ಸೇರಿದಂತೆ 43 ಮಂದಿ ಪ್ರಯಾಣಿಸುತ್ತಿದ್ದರು. ಮೃತರು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಉತ್ತರಪ್ರದೇಶ, ಒಡಿಶಾ ರಾಜ್ಯಕ್ಕೆ ಸೇರಿದವರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಹಿಂದೆ ಬಸ್‌ಗಳಿಗೆ ತುರ್ತು ಬಾಗಿಲುಗಳಿರಲಿಲ್ಲ. ಈ ಹಿಂದೆ ನಡೆದ ಹಲವು ದುರಂತಗಳ ನಂತರ ರಾಜ್ಯದ ಸರ್ಕಾರಿ ಬಸ್ ಹಾಗೂ ಖಾಸಗಿ ಸಂಸ್ಥೆಗೆ ಸೇರಿದ 50 ಸಾವಿರಕ್ಕೂ ಹೆಚ್ಚು ಬಸ್‌ಗಳಲ್ಲಿ ಎರಡು ತುರ್ತು ಬಾಗಿಲುಗಳನ್ನು ಅಳವಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಮೃತಪಟ್ಟ ಸಂತ್ರಸ್ತ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಕರ್ನೂಲ್ ಬಸ್ ದುರಂತ: ರಾಜ್ಯದ ಪ್ರಯಾಣಿಕರ ಪತ್ತೆಗೆ ಆಂಧ್ರಪ್ರದೇಶಕ್ಕೆ ದೌಡಾಯಿಸಿದ ಅಧಿಕಾರಿಗಳ ತಂಡ

