November 11, 2026
Wednesday, November 11, 2026
spot_img

ಬೆಳಗಾವಿಗೆ ಅನುದಾನದ ಕೊರತೆ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಅಭಯ್ ಪಾಟೀಲ್ ಅಸಮಾಧಾನ

ಹೊಸದಿಗಂತ ವರದಿ ಬೆಳಗಾವಿ:

ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕಳೆದ ಮೂರು ವರ್ಷಗಳಿಂದ ಸಮರ್ಪಕ ಅನುದಾನ ಬಿಡುಗಡೆಯಾಗುತ್ತಿಲ್ಲ. ಪ್ರತಿ ವರ್ಷ ಅಧಿವೇಶನದ ಸಂದರ್ಭದಲ್ಲಿ ₹15ರಿಂದ ₹20 ಕೋಟಿ ಅನುದಾನ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಯಾವುದೇ ಮಹತ್ವದ ಅನುದಾನ ನೀಡದಿರುವುದು ನಗರಾಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ದಕ್ಷೀಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ ರಾಜ್ಯ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ ರಸ್ತೆಗಳ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಸಮನ್ವಯದಿಂದ ಕೆಲಸ ಮಾಡಬೇಕಿದೆ. ಆದರೆ ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಕೇವಲ ಪ್ಯಾಚ್‌ವರ್ಕ್‌ಗೆ ಆದ್ಯತೆ ನೀಡಲಾಗುತ್ತಿದೆ. ಮಳೆ ಬಂದ ಎರಡು ದಿನಗಳಲ್ಲೇ ರಸ್ತೆಗಳಲ್ಲಿ ಗುಂಡಿಗಳು ಕಾಣಿಸಿಕೊಳ್ಳುತ್ತಿವೆ. ಶಾಶ್ವತ ಪರಿಹಾರ ಕಲ್ಪಿಸುವ ಬದಲು ತಾತ್ಕಾಲಿಕ ದುರಸ್ತಿಗೆ ಒತ್ತು ನೀಡಲಾಗುತ್ತಿದೆ ಎಂದು ಆಕ್ರೋಶ ಹೋರ ಹಾಕಿದರು.

ಮಹಾನಗರ ಪಾಲಿಕೆಗೆ ಸರ್ಕಾರದಿಂದ ಬರಬೇಕಾದ ಅನುದಾನ ಬಿಡುಗಡೆಯಾಗುತ್ತಿಲ್ಲ. ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಹಣಕಾಸು ನೆರವು ದೊರೆಯದಿರುವುದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳ ಕಾರ್ಯವೈಖರಿಯಲ್ಲೂ ಸುಧಾರಣೆ ಅಗತ್ಯವಿದೆ ಎಂದು ಹೇಳಿದರು.

ಇದನ್ನೂ ಓದಿ:

ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಾಸಕರು ಅಧಿವೇಶನದಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಿ ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಮಂಡಿಸಬೇಕು. ಕೇವಲ ಒಂದು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ನಡೆಸಿ ಉಳಿದ ದಿನಗಳಲ್ಲಿ ಇತರ ವಿಷಯಗಳಿಗೆ ಆದ್ಯತೆ ನೀಡುವ ಪ್ರವೃತ್ತಿ ಬದಲಾಗಬೇಕು. ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಜನರ ನಿರೀಕ್ಷೆಗಳಿಗೆ ಅಧಿವೇಶನ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಉದ್ಘಾಟನೆಗೆ ಸಿದ್ಧಪಡಿಸಬೇಕು. ಐಟಿ ಪಾರ್ಕ್, ಫ್ಲೈಓವರ್ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದ ಯೋಜನೆಗಳಿಗೂ ವೇಗ ನೀಡಬೇಕು. ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನ ಹಾಗೂ ಮಹಾನಗರ ಪಾಲಿಕೆಗೆ ನೀಡಬೇಕಾದ ವಿಶೇಷ ಅನುದಾನ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಸರ್ಕಾರಕ್ಕೆ ಆಗ್ರಹಿಸಿದರು.

Must Read

Skip to toolbar