ಭೂಕುಸಿತ ಆತಂಕ: ಪಶ್ಚಿಮ ಘಟ್ಟದಲ್ಲಿನ ಹೋಂ ಸ್ಟೇ, ರೆಸಾರ್ಟ್ ತೆರವಿಗೆ ಸರ್ಕಾರ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ.

ಈ ಸಂಬಂಧ ಕೆಲವು ದಿನಗಳ ಹಿಂದೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ 2015ರಿಂದ ಈಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು. ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ / ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಭೂ ದಾಖಲೆ) ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿದ್ದಾರೆ.

2015ರ ನಂತರದಲ್ಲಿ ರಾಜ್ಯದ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇ, ತೋಟ, ಬಡಾವಣೆ ಹಾಗೂ ಇನ್ನಿತರ ಅರಣ್ಯ ಒತ್ತುವರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಗಮನ ಹರಿಸಿ ಪರಿಶೀಲಿಸಿ ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸಲು ನೀಡಿರುವ ನಿರ್ದೇಶನಗಳನ್ನು ಪುನರುಚ್ಚರಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪ್ರಕೃತಿದತ್ತವಾದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಗುಡ್ಡ, ಬೆಟ್ಟಗಳನ್ನು ಕಡಿದು ಹೋಂ ಸ್ಟೇ, ಕಾಫಿ ತೋಟ, ರೆಸಾರ್ಟ್, ಬಡಾವಣೆ ನಿರ್ಮಾಣ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿರುವ ಮರಗಳನ್ನು ಕಡಿತಲೆ ಮಾಡುವುದರಿಂದ, ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕತ್ತರಿಸಿ ರಸ್ತೆ ನಿರ್ಮಾಣ ಮಾಡುತ್ತಿರುವುದರಿಂದ ಭೂಕುಸಿತ, ಗುಡ್ಡ ಕುಸಿತದಂತಹ ದುರಂತಗಳು ಸಂಭವಿಸುತ್ತವೆ ಎಂದು ತಜ್ಞರು ನೀಡಿರುವ ಅಭಿಪ್ರಾಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಶಿವಮೊಗ್ಗ, ಚಾಮರಾಜನಗರ ಸೇರಿದಂತೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ 2015ರ ಬಳಿಕ ನಿರ್ಮಾಣವಾಗಿರುವ ಅನಧಿಕೃತ ಹೋಂ ಸ್ಟೇ, ತೋಟ, ರೆಸಾರ್ಟ್, ಬಡಾವಣೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!