ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತಕ್ಕೆ 84 ಜನರು ಸಾವನ್ನಪ್ಪಿದ್ದು, ಹಲವರು ಕಣ್ಮರೆಯಾಗಿದ್ದಾರೆ . ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ.
ಈ ನಡುವೆ ಕೇರಳಕ್ಕೆ ಅಗತ್ಯ ನೆರವು ನೀಡುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ
NDRF ತಂಡದಿಂದ ರಕ್ಷಣಾ ಕಾರ್ಯ:
ಮೆಪ್ಪಾಡಿ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಮಣ್ಣಿನ ರಾಶಿಯೇ ಕಂಡು ಬಂದಿದ್ದು, ರಸ್ತೆ, ಸೇತುವೆ, ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಮತ್ತೊಂದೆಡೆ ಎನ್‌ಡಿಆರ್‌ಎಫ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಈವರೆಗೆ ಸುಮಾರು 101 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಕಲ್ಪೆಟ್ಟಾದ ಬತ್ತೇರಿ ಸೇಂಟ್ ಮೇರಿಸ್ ಎಸ್‌ಕೆಎಂಜೆ ಶಾಲೆಯಲ್ಲಿ ಆಶ್ರಯ ಶಿಬಿರವನ್ನು ಸ್ಥಾಪಿಸಲಾಗಿದ್ದು, ವೈದ್ಯಕೀಯ ತಂಡಗಳು ಅಂಬುಲೆನ್ಸ್‌ಗಳೊಂದಿಗೆ ಸ್ಥಳದಲ್ಲೇ ಬಿಡುಬಿಟ್ಟಿವೆ.