ಹೊಸ ದಿಗಂತ ವರದಿ,ಮಂಡ್ಯ :
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಬೀಳುತ್ತಿರುವ ಕಾರಣ ಕೃಷ್ಣರಾಜಸಾಗರ ಜಲಾಶಯ ಸೇರಿದಂತೆ ಈ ಭಾಗದ ಎಲ್ಲ ಜಲಾಶಯಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಾದರೂ ನದಿಗೆ ಅಧಿಕ ನೀರು ಹರಿಯಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮ ತಿಳಿಸಿದೆ.
ಕೃಷ್ಣರಾಜಸಾಗರ ಜಲಾಶಯಕ್ಕೆ 20 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದುಬರುತ್ತಿದ್ದರೆ, ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯದಲ್ಲಿ ಪ್ರಸ್ತುತ 12.80 ಅಡಿ ನೀರು ಸಂಗ್ರಹವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬಂದರೆ ನದಿಗೆ ಹೆಚ್ಚಿಗೆ ನೀರು ಹರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ಹೇಮಾವತಿ, ಹಾರಂಗಿ, ಕಬಿನಿ ಜಲಾಶಯಗಳೂ ಗರಿಷ್ಠ ಮಟ್ಟ ತಲುಪಿವೆ. ಈ ಭಾಗದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬೀಳುತ್ತಿದೆ. ಇದರಿಂದಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಹರಿದುಬರುವ ಸಾಧ್ಯತೆಗಳಿರುವುದರಿಂದ ಮುನ್ನಚ್ಚರಿಕಾ ಕ್ರಮವಾಗಿ ಜಲಾಶಯದಿಂದ ಇಂದು ಸಂಜೆ ಅಥವಾ ರಾತ್ರಿಯಿಂದ 25 ಸಾವಿರ ಕ್ಯೂಸೆಕ್‌ನಿಂದ 40 ಸಾವಿರ ಕ್ಯೂಸೆಕ್ ಪ್ರಮಾಣದಲ್ಲಿ ನದಿಗೆ ನೀರು ಹರಿಸಲಾಗುವುದು ಎಂದು ಕೃಷ್ಣರಾಜಸಾಗರ ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

