Monday, December 29, 2025

ವಿಜಯಪುರದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಹೋಟೆಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಜನಸಂಚಾರ ಕಡಿಮೆ ಇದ್ದ ಸಮಯದಲ್ಲಿ ಹೋಟೆಲ್‌ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಹೋಟೆಲ್‌ ಮುಂಭಾಗದ ಭಾಗ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸುತ್ತಮುತ್ತಲಿನವರು ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು. ಗಂಟೆಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ಸಾಧ್ಯವಾಯಿತು. ಆದರೆ, ಆಗಾಗಲೇ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗದ ರಚನೆಗಳು ಸುಟ್ಟು ಭಸ್ಮವಾಗಿದ್ದು, ವ್ಯಾಪಕ ಆಸ್ತಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ವರದಿಯಾಗಿಲ್ಲ. ಹೋಟೆಲ್ ಮುಚ್ಚಿದ್ದ ಸಮಯದಲ್ಲಿ ಘಟನೆ ನಡೆದಿರುವುದರಿಂದ ದೊಡ್ಡ ಅನಾಹುತ ತಪ್ಪಿದೆ ಎನ್ನಲಾಗಿದೆ. ಬೆಂಕಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

error: Content is protected !!